ಜಿಲ್ಲೆ

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ, ಪ್ರಮಾಣಪತ್ರ ವಿತರಣಾ ಸಮಾರಂಭ

Bengaluru Rural

ದೊಡ್ಡಬಳ್ಳಾಪುರ: ಕರೊನಾ ಕಡಿಮೆ ಇದ್ದಾಗ ಲಾಕ್‌ಡೌನ್ ಮಾಡಿ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಎಲ್ಲವನ್ನು ತರೆದು ಬೊಕಸ ತುಂಬಿಸಿಕೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಬಾಬುಜಗಜೀವನ್‌ರಾಮ್ ಭವನದಲ್ಲಿ ಬಮುಲ್‌ನಿಂದ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹಾಗೂ ಪ್ರಮಾಣಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೆಲವು ಕಠಿಣ ನಿರ್ಧಾರ ತೆಗೆದುಕೊಂಡಿಲ್ಲ. ಎಲ್ಲ ರಾಜ್ಯದ ವಲಸೆ ಕಾರ್ಮಿಕರನ್ನು ಸರಿಯಾಗಿ ಆರೋಗ್ಯ ತಪಾಸಣೆ ಮಾಡದಿರುವ ಕಾರಣ ಕರೊನಾ ಹೆಚ್ಚಾಗುತ್ತಿದೆ. ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದರು.

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಆಶಾ ಕಾರ್ಯಕರ್ತೆಯರು 1ರಿಂದ 5 ಲಕ್ಷದವರೆಗೆ ಸಾಲ ಪಡೆಯಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಸೊಸೈಟಿ ರಚನೆಗೆ ಚಿಂತನೆ ನಡೆಸಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ ಹಾಗೂ ತಮಿಳುನಾಡಿನಿಂದ ಬರುವ ವಲಸೆ ಕಾರ್ಮಿಕರಿಂದ ಹೆಚ್ಚು ಕರೊನಾ ಪ್ರಕರಣ ಬರುತ್ತಿದ್ದು, ಎಲ್ಲರನ್ನೂ ಕಡ್ಡಾಯವಾಗಿ ತಪಾಸಣೆ ಮಾಡಲಾಗುತ್ತಿದೆ. ಲಾಕ್‌ಡೌನ್‌ಗೆ ಸಾರ್ವಜನಿಕರು ಉತ್ತಮ ಸಹಕಾರ ನೀಡಿರುವ ಕಾರಣ ಕೆಲವೊಂದು ವಿನಾಯಿತಿ ನೀಡಲಾಗಿದೆ ಎಂದರು.

ಬಮುಲ್ ನಿರ್ದೇಶಕ ಬಿ.ಸಿ.ಆನಂದ್ ಮಾತನಾಡಿ, ನಾಯಕರು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರಿಂದ 3 ಸಾವಿರ ಸಹಾಯಧನ ನೀಡಲಾಗುತ್ತಿದೆ. ಕನಿಷ್ಠ ವೇತನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ಆಶಾ ಕಾರ್ಯಕರ್ತೆಯರು ಕನಿಷ್ಠ 10 ಸಾವಿರ ವೇತನ ನೀಡುವಂತೆ ಸಚಿವರಿಗೆ ಮನವಿ ಮಾಡಿದರು.

ಶಾಸಕ ಟಿ.ವೆಂಕಟರಮಣಯ್ಯ, ಬಮುಲ್ ಅಧ್ಯಕ್ಷ ನರಸಿಂಹಮೂರ್ತಿ, ವಿಧಾನಪರಿಷತ್ ಸದಸ್ಯ ರವಿ, ತಾಪಂ ಅಧ್ಯಕ್ಷ ಡಿ.ಸಿ.ಶಶಿಧರ್, ಕೆಪಿಸಿಸಿ ಸದಸ್ಯ ವೆಂಕಟೇಶ್ ಮತ್ತಿತರರಿದ್ದರು.