ಮಡಿಕೇರಿ: ಸರ್ವರಿಗೂ ಸಮಪಾಲು ಸೂತ್ರದಡಿ ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರೈಸ್ತ ಸಮುದಾಯದ ಕಳೆದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಜೆಟ್‌ನಲ್ಲಿ ನಿಗಮವನ್ನು ಘೋಷಿಸಿ ೧೦೦ ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿರುವುದು ಶ್ಲಾಘನಾರ್ಹ. ಪ್ರತ್ಯೇಕ ನಿಗಮ ಸ್ಥಾಪನೆಯಿಂದ ಹಿಂದುಳಿದಿರುವ ಕ್ರೈಸ್ತರ ಅಭ್ಯುದಯಕ್ಕೆ ಸಹಕಾರಿಯಾಗಲಿದೆ. ಶೈಕ್ಷಣಿಕ ಪ್ರಗತಿಗೂ ಪೂರಕವಾಗಿದೆ ಮತ್ತು ಕ್ರೈಸ್ತ ಮಂದಿರಗಳ ಅಭಿವೃದ್ಧಿ ಆಗಲಿದೆ ಎಂದು ಅಭಿಪ್ರಾಯಪಟ್ಟರು.
ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅಲ್ಪಸಂಖ್ಯಾತ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ೬೦ ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ೧೦ ಮೊರಾರ್ಜಿ ಶಾಲೆಗಳನ್ನು ತೆರೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಪಿಯುಸಿ ವಿದ್ಯಾರ್ಥಿಗಳಿಗೆ ಜೆಇಇ, ಎನ್‌ಇಇಟಿ ಮತ್ತು ಸಿಇಟಿಗೆ ತರಬೇತಿ ನೀಡಲು ೮ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ದಿಟ್ಟ ನಿರ್ಧಾರವಾಗಿದೆ ಎಂದು ಪೀಟರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.