ಮಂಗಳೂರು: ದ.ಕನ್ನಡ ಜಿಲ್ಲೆಗೆ ಉಸ್ತುವಾರಿಯಾಗಿ ಬಂದಿರುವುದು ನನಗೆ ಹೆಮ್ಮೆ ತಂದಿದೆ. ಪ್ರತೀ ವಾರಕ್ಕೊಮ್ಮೆ ಜಿಲ್ಲೆಗೆ ಭೇಟಿ ನೀಡಿ ಜನರ ಸಮಸ್ಯೆಗೆ ಸ್ಪಂದಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ದ.ಕ. ಜಿಲ್ಲಾ ನೂತನ ಉಸ್ತುವಾರಿ ಸಚಿವರಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ ಅವರು ಭಾನುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಆಡಳಿತಾತ್ಮಕವಾಗಿ ಜಿಲ್ಲೆಯ ಎಲ್ಲ ಸಮಸ್ಯೆಗಳನ್ನು ಬಗೆ ಹರಿಸುತ್ತೇನೆ. ಎಲ್ಲರೊಂದಿಗೆ ಸಂಪರ್ಕದಲ್ಲಿದ್ದು ಜಿಲ್ಲೆಯ ಅಭಿವೃದ್ಧಿಗೆ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಿಲ್ಲೆಯಲ್ಲಿ ಸೋಲಲು ಹಿಂದುತ್ವವೊಂದೇ ಕಾರಣವಲ್ಲ. ಹಿಂದುತ್ವದ ಅಲೆ ಇದ್ದ ಕಡೆ ಕಾಂಗ್ರೆಸ್ ಗೆದ್ದಿದೆ. ಈ ಬಗ್ಗೆ ಆತ್ಮಾವಲೋಕನ ಮಾಡಿ ಮುಂದಿನ ಲೋಕಸಭಾ, ಜಿ.ಪಂ, ತಾ.ಪಂ. ಚುನಾವಣೆಗೆ ಪಕ್ಷ ಸಂಘಟನೆ ಮಾಡಬೇಕಾಗಿದೆ ಎಂದರು.
ಮಂಗಳೂರಿನಲ್ಲಿ ಶೀಘ್ರದಲ್ಲೇ ಕಚೇರಿ ತೆರೆಯಲಾಗುವುದು. ವಾರದಲ್ಲಿ ಒಂದು ದಿನ ಸಾರ್ವಜನಿಕರ ಅಹವಾಲುಗಳನ್ನು ಖುದ್ದಾಗಿ ಸ್ವೀಕರಿಸಲಾಗುವುದು. ಯುವ ಕಾಂಗ್ರೆಸ್, ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ ಹಲವು ಬಾರಿ ಮಂಗಳೂರಿಗೆ ಭೇಟಿ ನೀಡಿದ್ದೇನೆ. ಈ ಭಾಗದ ಸಂಪೂರ್ಣ ಪರಿಚಯ ನನಗಿದೆ. ಹಾಗಾಗಿ ಇಲ್ಲಿನ ಉಸ್ತುವಾರಿ ನಿಭಾಯಿಸಲು ಕಷ್ಟವಾಗಲಾರದು. ಸರ್ಕಾರದ ನೂತನ ಯೋಜನೆಗಳನ್ನು ಬಡ ಜನರಿಗೆ ತಲುಪಿಸುವಲ್ಲಿ ಇಲ್ಲಿನ ನಾಯಕರು, ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ರೈ, ಮಾಜಿ ರಾಜ್ಯ ಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಹಿರಿಯ ಮುಖಂಡ ಕೋಡಿಜಾಲ್ ಇಬ್ರಾಹೀಂ, ಜಿ.ಕೃಷ್ಣಪ್ಪ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೆ.ಎ.ಬಾವ, ಪದ್ಮರಾಜ್.ಆರ್, ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಶಾಲೆಟ್ ಪಿಂಟೊ, ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ಇನಾಯತ್ ಆಲಿ ಮೊದಲಾದವರಿದ್ದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ವಂದಿಸಿದರು.