ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಹರಡುವುದನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಬೇಗ ಪತ್ತೆ ಹಚ್ಚುವುದು ಅಗತ್ಯವಿದೆ. ಇದಕ್ಕಾಗಿ ಪ್ರತಿ ದಿನ ಕನಿಷ್ಠ 10 ರಿಂದ 12 ಸಾವಿರ ಕೋವಿಡ್ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಸೋಂಕು ಹರಡುವುದನ್ನು ತಪ್ಪಿಸಲು ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸ್ಥಳಾಂತರಿಸಬೇಕು. ವೈದ್ಯಾಧಿಕಾರಿಗಳ ನಿರ್ಧಾರದ ಮೇಲೆ ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರ ಮನೆಯನ್ನು ಸೀಲ್‌ಡೌನ್ ಮಾಡಬೇಕು. ಸುತ್ತಮುತ್ತಲಿನ 4 ಮನೆಗಳನ್ನು ಸೇರಿಸಿ ಕಂಟೈನ್‌ಮೆಂಟ್ ಜೋನ್ ಎಂದು ಘೋಷಿಸಬೇಕು. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸುವಾಗ, ಜನರ ಪ್ರತಿರೋಧ ಕಂಡುಬಂದಲ್ಲಿ ಪೊಲೀಸ್ ನೆರವು ಪಡೆಯಬಹುದು ಎಂದರು.
ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ಶೀಘ್ರದಲ್ಲಿ ಸ್ಥಳಾಂತರಿಸಲು ಅನುಕೂಲವಾಗುವಂತೆ ಪ್ರತಿ 2 ಗಂಟೆಗೊಮ್ಮೆ ಸೋಂಕಿತರ ಮಾಹಿತಿಯನ್ನು ಸಂಬಂಧಪಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೋವಿಡ್ ಕೇರ್‌ಸೆಂಟರ್‌ನಲ್ಲಿ ಈ ಹಿಂದಿನಂತೆಯೇ ಉತ್ತಮ ರೀತಿಯ ಊಟ ಮತ್ತು ಉಪಾಹಾರ ವ್ಯವಸ್ಥೆ ಮಾಡುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್-19 ಪ್ರಮಾಣವನ್ನು ಶೇ.1ಕ್ಕಿಂತ ಕಡಿಮೆಗೊಳಿಸಲು ಟೆಸ್ಟಿಂಗ್, ಟ್ರೇಸಿಂಗ್ ಸೇರಿದಂತೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯವಿದೆ ಎಂದರು. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಡಿಎಚ್‌ಒ ಡಾ.ನಾಗಭೂಷಣ ಉಡುಪ ಉಪಸ್ಥಿತರಿದ್ದರು.
ಒಂದು ಪಾಸಿಟಿವ್‌ಗೆ 20 ಜನರ ಪರೀಕ್ಷೆ: ಪ್ರತಿ ಪಾಸಿಟಿವ್ ಪ್ರಕರಣಕ್ಕೆ 20ಕ್ಕಿಂತ ಹೆಚ್ಚು ಸಂಪರ್ಕಿತರನ್ನು ಪತ್ತೆ ಹಚ್ಚಿನ ಪರೀಕ್ಷೆಗೆ ಒಳಪಡಿಸಬೇಕು. ಅದರಲ್ಲಿ ಕಡ್ಡಾಯವಾಗಿ 10ಕ್ಕಿಂತ ಹೆಚ್ಚು ಪ್ರಾಥಮಿಕ ಸಂಪರ್ಕಿತರು ಇರುವಂತೆ ನೋಡಿಕೊಳ್ಳಬೇಕು. ರೈಲುಗಳ ಮೂಲಕ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಪ್ರಯಾಣಿಕರ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಪಡೆಯಲು ನೇಮಿಸಿರುವ ಅಧಿಕಾರಿಗಳು ನೆಗೆಟಿವ್ ವರದಿ ಇಲ್ಲದೇ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.