ಮೈಸೂರು: ಹುಟ್ಟಿನಿಂದ ಸಾವಿನ ತನಕವೂ ಕಾನೂನು ಅನ್ವಯವಾಗುತ್ತದೆ. ಹೀಗಾಗಿ ನಾವು ಕಾನೂನಿನ ಕುರಿತು ತಿಳಿದುಕೊಳ್ಳುವುದು ಅತ್ಯಂತ ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್. ರಘುನಾಥ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಗರದ ಮಾನವ ಸಂಪನ್ಮೂಲ ಅಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಮಹಿಳಾ ಸಬಲೀಕರಣದ ಉದ್ದೇಶದಿಂದ ಎರಡು ದಿನಗಳ ಕಾಲ ಹಮ್ಮಿಕೊಂಡ ಕಾನೂನು ಅರಿವು ತರಬೇತಿ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿ, ಜನರ ಹಿತ ಕಾಯುವ ಸಲುವಾಗಿ ಹಲವಾರು ಕಾಯ್ದೆಗಳನ್ನು ಸರ್ಕಾರ ರೂಪಿಸಿದೆ. ಆ ಕಾಯ್ದೆಗಳ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವರಾಜ ಭೂತೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಬಿವೃದ್ಧಿ ಯೋಜನೆಯ ಮೈಸೂರು ಪ್ರಾದೇಶಿಕ ನಿರ್ದೇಶಕ ಬಿ. ಜಯರಾಮ ನೆಲ್ಲಿತ್ತಾಯ, ಜಿಲ್ಲಾ ನಿರ್ದೇಶಕ ಲಕ್ಷ್ಮಣ, ತರಬೇತಿ ಸಂಸ್ಥೆಯ ಪ್ರಾಂಶುಪಾಲ ದಿನೇಶ್ ಪೂಜಾರಿ, ವಕೀಲ ದಿಲೀಪ್ ಹಾಗೂ ಇತರರು ಇದ್ದರು.