ಅರಕಲಗೂಡು: ಮಳೆಗಾಲ ಶುರುವಾರ ಹಿನ್ನೆಲೆಯಲ್ಲಿ ಡೆಂಘೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪುಷ್ಪಲತಾ ತಿಳಿಸಿದರು.
ರಾಷ್ಟ್ರೀಯ ಡೆಂಘೆ ದಿನದ ಅಂಗವಾಗಿ ಇತ್ತೀಚೆಗೆ ತಾಪಂ ಸಭಾಂಗಣದಲ್ಲಿ ಗ್ರಾಪಂ ಪಿಡಿಒಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ಡೆಂೆ ಸೊಳ್ಳೆಯಿಂದ ಹರಡುವ ರೋಗವಾಗಿದೆ. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದಾಗ ಸೊಳ್ಳೆಗಳ ನಿಯಂತ್ರಣ ಸಾಧ್ಯ. ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ, ರಸ್ತೆ ಚರಂಡಿಗಳಲ್ಲಿ ನೀರು, ಕೊಳಚೆ ತುಂಬಿ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗದಂತೆ ನೋಡಿಕೊಳ್ಳುವ ಜತೆಗೆ ಡೆಂೆ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಗ್ರಾಮ ಪಂಚಾಯಿತಿಗಳು ನಡೆಸಬೇಕು. ರೋಗಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯುವಂತೆ ಜನರಿಗೆ ಮನವರಿಕೆ ಮಾಡಬೇಕು. ಕೋವಿಡ್ ಮತ್ತೆ ಕಾಣಿಸಿಕೊಳ್ಳುತ್ತಿದ್ದು ಈ ಕುರಿತು ಸಹ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕು ಎಂದರು.
ತಾಪಂ ಇಒ ಡಿ.ಡಿ. ಪ್ರಕಾಶ್ ಮಾತನಾಡಿ, ಶಾಲೆ, ಅಂಗನವಾಡಿ ಕೇಂದ್ರಗಳ ಬಳಿ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡುವಂತೆ ತಿಳಿಸಿದರು.
ಕೀಟ ಶಾಸ್ತ್ರಜ್ಞ ರಾಜೇಶ್ ಕುಲಕರ್ಣಿ ಡೆಂೆ ರೋಗ ಹರುಡುವ ವಿಧಾನ ಹಾಗೂ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಟಿ. ಪರಮೇಶ್, ಹಿರಿಯ ಆರೋಗ್ಯ ನಿರೀಕ್ಷಕ ಚಂದ್ರೇಗೌಡ ಇದ್ದರು.