ತುಮಕೂರು: ಅಲ್ಪಸಂಖ್ಯಾತರ ಓಲೈಕೆಗೆ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದುಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಇದರಿಂದ ಪ್ರೇರಿತರಾದ ಮತೀಯ ಗೂಂಡಾಗಳು ಗಣೇಶೋತ್ಸವದ ಮೇಲೆ ಕಲ್ಲು ತೂರುವುದು, ಹಿಂದು ಶ್ರದ್ಧಾ ಕೇಂದ್ರಗಳ ಮೇಲೆ ದಾಳಿ ಮಾಡುತ್ತಿದ್ದು ಇಂತಹ ದುಷ್ಕೃತ್ಯಗಳಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.
ನಗರದಲ್ಲಿ ಶುಕ್ರವಾರ ಹಿಂದು ಮಹಾಗಣಪತಿ ವಿಸರ್ಜನಾ ಮಹೋತ್ಸವದಲ್ಲಿ ಭಾಗಿಯಾದ ಬಳಿಕ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಮಠಾಧ್ಯಕ್ಷ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿ. ಪೆಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಗೆ ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ವೈಫಲ್ಯ ಎಂದು ಆರೋಪಿಸಿದ್ದ ಕಾಂಗ್ರೆಸ್ಸಿಗರು, ಪೂರ್ವಯೋಜಿತ ಮದ್ದೂರು ಕಲ್ಲು ತೂರಾಟ ಪ್ರಕರಣದಲ್ಲಿ ಸರ್ಕಾರ, ಪೊಲೀಸ್ ಹಾಗೂ ಗುಪ್ತಚರ ಇಲಾಖೆಯ ವೈಫಲ್ಯ ಎಂದರು.
ಮದ್ದೂರಿನಲ್ಲಿ ಗಣೇಶೋತ್ಸವದಲ್ಲಿ ದಾಂಧಲೆ ಮಾಡಲು ಪೂರ್ವಯೋಜಿತ ಸಂಚು ರೂಪಿಸಲಾಗಿತ್ತು. ಕಲ್ಲುಗಳನ್ನು ಮೊದಲೇ ಸಂಗ್ರಹಿಸಿದ್ದು ಇದು ಪೊಲೀಸರು, ಗುಪ್ತಚರ ಇಲಾಖೆಗೆ ತಿಳಿದಿರಲಿಲ್ಲವೆ? ಧರ್ಮಸ್ಥಳದ ಬುರುಡೆ ಪ್ರಕರಣದ ಹಿಂದೆ ಯಾರ್ಯಾರಿದ್ದಾರೆ ಬಹಿರಂಗ ಪಡಿಸಿ, ಹಿಂದು ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿರುವ ಮತೀಯ ಗೂಂಡಾಗಳಿಗೆ ಕಾನೂನಿನ ಭಯವೇ ಇಲ್ಲವಾಗಿದೆ. ಏನೇ ಮಾಡಿದರೂ ಕಾಂಗ್ರೆಸ್ ಸರ್ಕಾರ ತಮ್ಮ ರಕ್ಷಣೆಗಿದೆ ಎಂಬ ಕಾರಣಕ್ಕೆ ಅಲ್ಪಸಂಖ್ಯಾತ ಗೂಂಡಾಗಳು ದೌರ್ಜನ್ಯ ನಡೆಸುತ್ತಿದ್ದಾರೆ. ಸರ್ಕಾರ ಅಂತಹವರ ಎಡೆಮುರಿ ಕಟ್ಟಬೇಕು, ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಚಾಮುಂಡೇಶ್ವರಿ ದೇವಿ ನೆಲೆಸಿರುವ ಚಾಮುಂಡಿ ಬೆಟ್ಟ ಹಿಂದುಗಳಿಗೆ ಸೇರಿದ್ದಲ್ಲ ಎಂದು ಹೇಳುವ ಕಾಂಗ್ರೆಸ್ಸ್ಸಿಗರು ಅದನ್ನು ಟಿಪು$್ಪ, ಹೈದರಾಲಿ ಬೆಟ್ಟ ಮಾಡಲು ಹೊರಟಿದ್ದಾರೆಯೆ? ಇಂತಹ ಹಿಂದು ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಉಗ್ರ ಹೋರಾಟ ಮಾಡುತ್ತದೆ. ಮುಂದೆ ರಾಜ್ಯದ ಜನ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುತ್ತಾರೆ. ಎಂ.ಪಿ.ರೇಣುಕಾಚಾರ್ಯ ಮಾಜಿ ಸಚಿವ