ಜಿಲ್ಲೆ

ಪ್ರಜಾಪ್ರಭುತ್ವ ಉಳಿಸಲು ಎನ್‌ಡಿಎ ಸೋಲಿಸಿ: ಮಾಜಿ ಸಚಿವ ಬಿ.ಸೋಮಶೇಖರ್ ಕರೆ

ಮಂಡ್ಯ: ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಜನರು ಸೋಲಿಸಬೇಕೆಂದು ಮಾಜಿ ಸಚಿವ ಬಿ.ಸೋಮಶೇಖರ್ ಕರೆ ನೀಡಿದರು.

ಕಳೆದ 10 ವರ್ಷದಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂವಿಧಾನ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಇದು ಜನರಿಗೆ ಗೊತ್ತಾಗುತ್ತಿಲ್ಲ. ಹಿಂದುಳಿದ ಮತ್ತು ದಲಿತರಿಗೆ ಅನ್ಯಾಯವಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಲಕ್ಷಾಂತರ ಕೋಟಿ ರೂ ಹಗರಣ ನಡೆದಿದ್ದು, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್‌ಐಟಿ ನೇಮಕ ಮಾಡಿ ತನಿಖೆ ನಡೆಸಬೇಕು. 2019ರ ಪುಲ್ವಾಮ ದಾಳಿಯಲ್ಲಿ ಇಡೀ ಸರ್ಕಾರವೇ ಭಾಗಿಯಾಗಿದೆ. ಇದರ ಬಗ್ಗೆ ಯಾರೂ ಚಕಾರ ಎತ್ತಿಲ್ಲ. ಪ್ರತಿ ಬಾರಿಯೂ ಮೋಸದಿಂದ ಚುನಾವಣೆ ಗೆಲ್ಲುತ್ತಿದ್ದಾರೆ. 2014ರಲ್ಲಿ ಅಧಿಕಾರಕ್ಕೆ ಬರಬೇಕಾದರೆ ಬಿಜೆಪಿ 2 ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಹೇಳಿದರು. ಅಂದು ಶೇ.34ರಷ್ಟಿದ್ದ ನಿರುದ್ಯೋಗ ಇಂದು ಶೇ.65ಕ್ಕೆ ಹೆಚ್ಚಳವಾಗಿದೆ. ಪ್ರತಿ ಬಿಪಿಎಲ್ ಕುಟುಂಬದವರ ಖಾತೆಗೆ 15 ಲಕ್ಷ ರೂ ಹಾಕುತ್ತೇನೆಂದು ಹೇಳಿ ಹಾಕಲಿಲ್ಲ. ಈ ರೀತಿ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಜನತೆಗೆ ಅನ್ಯಾಯ ಮಾಡುತ್ತಿದ್ದಾರೆಂದು ದೂರಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್, ಜಿಲ್ಲಾ ವಕ್ತಾರ ಸಿ.ಎಂ.ದ್ಯಾವಪ್ಪ ಹಾಜರಿದ್ದರು.