ಮಂಗಳೂರು : ವಿದ್ಯಾರ್ಥಿಗಳು ಜೀವನದಲ್ಲಿ ನಿಖರವಾದ ಗುರಿ ಹೊಂದಿರಬೇಕು. ಗುರಿ ಸಾಧಿಸುವಲ್ಲಿ ನಿರಂತರ ಪ್ರಯತ್ನ ಹಾಗೂ ಸ್ವಯಂ ಶಿಸ್ತು ಅಳವಡಿಸಿಕೊಳ್ಳಬೇಕು. ಕಠಿಣ ಪರಿಶ್ರಮ, ಸಮರ್ಪಣಾ ಮನೋಭಾವ ಹಾಗೂ ಛಲದೊಂದಿಗೆ ಮುನ್ನಡೆದರೆ ಸಾಧನೆಯ ಪಥ ತಲುಪಲು ಸಾಧ್ಯ ಎಂದು ಎಕ್ಸ್‌ಪರ್ಟ್ ಶಿಕ್ಷಣ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್ ನಾಯಕ್ ಹೇಳಿದರು.
ನಗರದ ಭಗವತಿ ಕ್ಷೇತ್ರದ ಕೂಟಕ್ಕಳ ಸಭಾಂಗಣದಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆಯೋಜಿಸಿದ ಓರಿಯಂಟೇಶನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಲೇಜಿನಲ್ಲಿ ಕೆಲವೊಂದು ನಿಯಮ ನಿಬಂಧನೆಗಳು ಇದ್ದು ಅದನ್ನು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಮುರಿಯಬಾರದು. ವಿದ್ಯಾರ್ಥಿಗಳು ತಮಗೆ ಸಿಗುವ ಪ್ರತಿಯೊಂದು ಸಣ್ಣ ಅವಕಾಶಗಳನ್ನು ಕೂಡ ವ್ಯರ್ಥಮಾಡಿಕೊಳ್ಳಬಾರದು. ಶಿಕ್ಷಣ ಹಾಗೂ ವೃತ್ತಿ ಜೀವನದ ಮುಂದಿನ ಸವಾಲುಗಳನ್ನು ಎದುರಿಸುವಲ್ಲಿ ಮಾನಸಿಕವಾಗಿ ಸಿದ್ದರಾಗಬೇಕು. ಪೋಷಕರು ತಮ್ಮ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಪೋಷಕರು ತಮ್ಮ ಮಕ್ಕಳಿಗೆ ಮಾದರಿಯಾಗಬೇಕು ಎಂದು ಅವರು ಹೇಳಿದರು.
ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಮಾಹಿತಿ-ತಂತ್ರಜ್ಞಾನ ವಿಭಾಗದ ನಿರ್ದೇಶ ಅಂಕುಶ್. ಎನ್. ನಾಯಕ್ ತಂತ್ರಜ್ಞಾನದ ಬಳಕೆಯ ಕುರಿತು ಮಾಹಿತಿ ನೀಡಿದರು. ಶೈಕ್ಷಣಿಕ ಹಂತದಲ್ಲಿ ತಂತ್ರಜ್ಞಾನದ ಸರಿಯಾದ ಬಳಕೆ ಮಾಡುವುದರ ಕುರಿತು ವಿವರಿಸಿದ ಅವರು ಮೊಬೈಲ್, ದೂರದರ್ಶನ ಬಳಕೆ ಕಡಿಮೆ ಮಾಡಿ ಆದರ್ಶ ವ್ಯಕ್ತಿಗಳಾಗಬೇಕು ಎಂದರು.
ಎಐಸಿಇ ವಿಭಾಗದ ಸಂಯೋಜಕ ಪ್ರೊ. ಶ್ಯಾಮ್ ಪ್ರಸಾದ್ ಎಸ್ ಅವರು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಹಾಗೂ ಕಾಲೇಜಿನ ವಿವಿಧ ಕೋರ್ಸ್‌ಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಶೈಕ್ಷಣಿಕ ಸಮಿತಿಯ ಸದಸ್ಯ ಬಿ. ವಿನಯ್ ಕುಮಾರ್ ಇವರು ಶೈಕ್ಷಣಿಕ ಸಾಲಿನ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. .
ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಮಚಂದ್ರ ಭಟ್ ಮಾತನಾಡಿ ‘ ಪದವಿಪೂರ್ವ ಹಂತವು ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಂತ ಮಹತ್ತರ ಘಟ್ಟವಾಗಿದ್ದು ಈ ಸಮಯದ ಸದುಪಯೋಗ ಪಡೆದುಕೊಳ್ಳಬೇಕು. ಕಾಲೇಜಿನ ಶೈಕ್ಷಣಿಕ ವಾತಾವರಣವನ್ನು ಕಾಪಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಸ್ತು ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಸಂಯೋಜಕಿ ರಾಧಿಕಾ ಭಟ್ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಪ್ರಥಮ ಪಿಯುಸಿ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಪ್ರಶಾಂತ್ ಪೈ ವಂದಿಸಿದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಅನುಷಾ ಕೆ ಕಾರ್ಯಕ್ರಮ ನಿರೂಪಿಸಿದರು.