ಚಿಕ್ಕಮಗಳೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದೃಷ್ಟಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ನೀಡಿದರು.
ನಗರದ ಐಡಿಎಸ್‌ಜಿ ಸರ್ಕಾರಿ ಕಾಲೇಜಿನಲ್ಲಿ ಶುಕ್ರವಾರ ನಡೆದ ವಿದ್ಯಾರ್ಥಿ ಸಂಘಗಳ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವುದರಿಂದ ಸರ್ವಾಂಗೀಣವಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಮಾನಸಿಕ. ದೈಹಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ ಎಂದರು.
ವಿದ್ಯಾರ್ಥಿ ದೆಸೆಯಲ್ಲಿ ಬಹಳಷ್ಟು ಆಕರ್ಷಣೆಗಳಿರುತ್ತವೆ. ನಾವು ಅವುಗಳಿಗೆ ಮನಸೋತರೆ ನಮ್ಮ ವಿದ್ಯಾಭ್ಯಾಸ ಮೊಟಕುಗೊಂಡು ಬದುಕಿನ ದಾರಿ ತಪ್ಪುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಬಹಳ ಎಚ್ಚರಿಕೆಯಿಂದ ವಿದ್ಯಾರ್ಜನೆ ಮಾಡಬೇಕು. ವಿದ್ಯಾರ್ಥಿನಿಯರು ಕೇವಲ ಇಂಜಿನಿಯರ್‌ಗಳಾಗದೇ ಐಎಎಸ್, ಐಪಿಎಸ್ ಅಧಿಕಾರಿಗಳಾಗಿಯೂ ಹೊರಹೊಮ್ಮಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಜನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಅಭಿವೃದ್ಧಿಗೆ ಈಗಾಗಲೇ ಎರಡು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಅಭಿವೃದ್ದಿ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ವಿದ್ಯಾರ್ಥಿ ಜೀವನ ಬಂಗಾರದ ಜೀವನ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಬದುಕಿನಲ್ಲಿ ಮುಂದೆ ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳುವುದನ್ನೂ ಕಲಿಯಬೇಕು. ನಾಡನ್ನು ಕಟ್ಟುವ. ದೇಶವನ್ನು ಬೆಳೆಸುವ. ಉತ್ತಮ ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸ ನೀಡಿದ ಸಾಹಿತಿ ಎಚ್.ಎಂ.ನಾಗರಾಜರಾವ್ ಕಲ್ಕಟ್ಟೆ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಗುರುತಿಸಿಕೊಳ್ಳುವುದಾದರೆ ಒಳ್ಳೆಯವರೊಂದಿಗೆ, ಪ್ರಾಮಾಣಿಕರು, ಸತ್ಯವಂತರೊAದಿಗೆ ಗುರುತಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಕನಸು ದೊಡ್ಡದಾಗಿರಬೇಕು. ಎತ್ತರದ ಗುರಿ ಇರಬೇಕು. ಜೀವನದಲ್ಲಿ ಯಶಸ್ವಿಯಾಗಬೇಕಾದರೆ ಆತ್ಮವಿಶ್ವಾಸವನ್ನು ರೂಡಿಸಿಕೊಳ್ಳಬೇಕು ಎಂದು ಹೇಳಿದರು.
ಚಿತ್ರನಟ ಧರ್ಮಣ್ಣ ಮಾತನಾಡಿ, ಮಕ್ಕಳು ವಿದ್ಯಾರ್ಥಿ ದೆಸೆಯಲ್ಲೇ ತಮ್ಮಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಗುರುತಿಸಿಕೊಳ್ಳಬೇಕು. ಗೆದ್ದವರನ್ನು ಹಿಂಬಾಲಿಸುವ ಬದಲು ಅವರ ಸಾಧನೆ ಮತ್ತು ಅದರ ಹಿಂದಿನ ಪರಿಶ್ರಮವನ್ನು ಹಿಂಬಾಲಿಸಬೇಕು ಎಂದರು.
ಮೈಸೂರಿನ ಜಾನಪದ ಕಲಾವಿದ ಅಮ್ಮ ರಾಮಚಂದ್ರ ಮಾತನಾಡಿ, ಹೆತ್ತವರನ್ನು, ವಿದ್ಯೆ ಕಲಿಸಿಕೊಟ್ಟ ಗುರುಗಳನ್ನು ಗೌರವಿಸಿದರೆ ನಮಗೆ ಜೀವನದಲ್ಲಿ ಎಂದಿಗೂ ಸೋಲಾಗುವುದಿಲ್ಲ ಎಂದು ಹೇಳಿದರು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಪುರಸ್ಕರಿಸಲಾಯಿತು. ಚಿತ್ರನಟ ಧರ್ಮಣ್ಣ ಚಲನಚಿತ್ರ ನಟರ ಧ್ವನಿ ಅನುಕರಣೆ ಮೂಲಕ ಹಾಗೂ ಜಾನಪದ ಕಲಾವಿದ ಅಮ್ಮ ರಾಮಚಂದ್ರ ಗಾಯನದ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು.
ಇದೇ ವೇಳೆ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ ಆರೋಗ್ಯ ಕೇಂದ್ರವನ್ನು ಶಾಸಕರು ಉದ್ಘಾಟಿಸಿದರು. ಕಾಲೇಜು ಪ್ರಾಚಾರ್ಯೆ ಡಾ.ಕೆ.ಸಿ.ಚಾಂದಿನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರಾಧಾ ಸುಂದರೇಶ್, ಸುಮಂತ್, ರಾಜಶೇಖರ್, ಆದಿಲ್, ಮೋಹನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಮತ್ತಿತರರಿದ್ದರು.