ಧಾರವಾಡ: ನಗರದ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ವತಿಯಿಂದ 38ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಅಂಗವಾಗಿ ನೇತ್ರದಾನ ಜಾಗೃತಿ ಕಾರ್ಯಕ್ರಮವನ್ನು ಸೆ. 2ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ.
ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ ಅಂಧರ ಕಲ್ಯಾಣ ಆಶ್ರಮದ ಮಕ್ಕಳಿಂದ ಸಂಗೀತ ಕಾರ್ಯಕ್ರಮ ಇದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ, ಐಎಂಎ ಅಧ್ಯಕ್ಷ ಡಾ. ಗಿರೀಶ ನಾಡಿಗೇರ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.