ಜಿಲ್ಲೆ

ನಕಲಿ ನಂದಿನಿ ತುಪ್ಪ ತಯಾರಿಕೆ: ನಾಲ್ವರು ಆರೋಪಿಗಳ ಬಂಧನ

Mysuru

ಮೈಸೂರು: ನಗರದ ಹೊರವಲಯದಲ್ಲಿ ಇತ್ತೀಚೆಗೆ ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಗಳನ್ನು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಚೇತನ್ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. ಪ್ರಕರಣ ಸಂಬಂಧ ಡಿವೈಎಸ್ಪಿ ಸುಮಿತ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ನಾಲ್ವರು ಆರೋಪಿಗಳ ಪೈಕಿ ಇಬ್ಬರ ಹೆಸರು ಎಫ್ಐಆರ್ ನಲ್ಲಿ ಉಲ್ಲೇಖ ಆಗಿತ್ತು. ತನಿಖೆ ಮುಂದುವರೆದಿದ್ದು, ಆರೋಪಿಗಳು ನೀಡುವ ಸುಳಿವಿನ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ತನಿಖೆ ಪ್ರಗತಿಯಲ್ಲಿ ಇರುವ ಹಿನ್ನೆಲೆಯಲ್ಲಿ ಹೆಸರು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದರು.

ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ. ಆರೋಪಿಗಳು ಬಹಳ ವರ್ಷಗಳಿಂದ ಮೈಸೂರಿನಲ್ಲೇ ನೆಲೆಸಿದ್ದರೆಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದುವರೆಗಿನ ತನಿಖೆ ಪ್ರಕಾರ ಕೆಎಂಎಫ್ ನ ಸಿಬ್ಬಂದಿ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ, ಹಾಗಂತ ಈಗಲೇ ನಿರ್ಧಾರ ಕೈಗೊಳ್ಳಲಾಗುವುದಿಲ್ಲ. ದಾಳಿ ವೇಳೆ 10 ಟನ್ ನಕಲಿ ನಂದಿನಿ ತುಪ್ಪ ಪತ್ತೆಯಾಗಿದೆ ಎಂದರು.