ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಬಹುನಿರೀಕ್ಷಿತ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಇದುವರೆಗೆ 5 ಸಾವಿರಕ್ಕೂ ಹೆಚ್ಚು ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತಭವನದಲ್ಲಿನ ಡಿಸಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಸೆ. 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬೃಹತ್ ಉದ್ಯೋಗಮೇಳ ಆಯೋಜಿಸಲಾಗಿದ್ದು ಸಾವಿರಾರು ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಸುಮಾರು 15 ಸಾವಿರಷ್ಟು ಉದ್ಯೋಗಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಎಲ್ಲ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳದಲ್ಲಿ ನೂರಾರು ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಉದ್ಯೋಗ ಮೇಳವನ್ನು ಯಶಸ್ವಿಯಾಗಿ ನಿಭಾಯಿಸಲು ಅಧಿಕಾರಿಗಳ ಸಹಭಾಗಿತ್ವ ಮುಖ್ಯವಾಗಿದ್ದು ಉದ್ಯೋಗ ಮೇಳ ಆಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಆಯಾ ಸಮಿತಿಯ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಹೆಚ್ಚೆಚ್ಚು ಪ್ರಚಾರ ಮಾಡಲಾಗುತ್ತಿದೆ: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳ ಮೂಲಕ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಮೂಲಕವೂ ಉದ್ಯೋಗ ಮೇಳದ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಂಡು ಪ್ರತಿ ಮನೆಗೂ ಮಾಹಿತಿ ತಲುಪಿಸಲು ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ ತರಬೇತಿ ಪಡೆದ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ ಎಂದರು.
ಸದುಪಯೋಗ ಮಾಡಿಕೊಳ್ಳಿ: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧಾ ಮಾತನಾಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಗ್ರಾಮ ಪಂಚಾಯಿತಿ ಪಿಡಿಒ ಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದ್ದು ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮ ವಹಿಸಿ ಎಂದು ಹೇಳಲಾಗಿದೆ. ಉದ್ಯೋಗಾಂಕ್ಷಿಗಳು ಕೂಡ ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ತಾಲ್ಲೂಕು ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿಯೂ ಕೂಡ ಅರ್ಜಿ ಸಲ್ಲಿಸಬಹುದಾಗಿದ್ದು ಉದ್ಯೋಗಾಂಕ್ಷಿಗಳು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.