ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮ ಪಂಚಾಯಿತಿ ಅವ್ಯವಸ್ಥೆ ಹಾಗೂ ಪಿಡಿಒ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 
ಜಿಲ್ಲೆ

ಭೀಮನಬೀಡು ಗ್ರಾಪಂ ಕಚೇರಿಯಲ್ಲಿ ರೈತ ಸಂಘ ಪ್ರತಿಭಟನೆ

ಗುಂಡ್ಲುಪೇಟೆ: ತಾಲೂಕಿನ ಭೀಮನಬೀಡು ಗ್ರಾಮ ಪಂಚಾಯಿತಿ ಅವ್ಯವಸ್ಥೆ ಹಾಗೂ ಪಿಡಿಒ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಶನಿವಾರ ಭೀಮನಬೀಡು ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತಸಂಘದ ಕಾರ್ಯಕರ್ತರು, ಅಭಿವೃದ್ಧಿ ಅಧಿಕಾರಿ ಇ-ಸ್ವತ್ತು ಮಾಡಿಕೊಡಲು ಹಣಕ್ಕೆ ಬೇಡಿಕೆಯಿಡುತ್ತಿದ್ದಾರೆ. ಹಣ ಕೊಡದಿದ್ದರೆ ಅರ್ಜಿಗಳನ್ನು ಬಾಕಿ ಉಳಿಸುವುದರಿಂದ ಹಲವಾರು ತಿಂಗಳಿನಿಂದ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ. ಹಲವಾರು ತಿಂಗಳಿನಿಂದಲೂ ಗ್ರಾಮದ ಚರಂಡಿಗಳಲ್ಲಿ ಹೂಳೆತ್ತಿಸದ ಪರಿಣಾಮ ಗ್ರಾಮದ ನಿವಾಸಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು.

ಅಂಗನವಾಡಿ ಹಾಗೂ ಶಾಲೆ ಕೊಠಡಿಗಳಲ್ಲಿ ಮಳೆ ನೀರು ಸೋರುತ್ತಿದ್ದರೂ ರಿಪೇರಿ ಮಾಡಿಸಲು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಇದರಿಂದ ಪಾಲಕರು ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಭಯಪಡುತ್ತಿದ್ದಾರೆ. ಈ ಬಗ್ಗೆ ಹಲವಾರು ಬಾರಿ ದೂರು ನೀಡಿದ್ದರೂ ಯಾವುದೇ ಉಪಯೋಗವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಬರುವಂತೆ ಪಟ್ಟುಹಿಡಿದರು.

ನಂತರ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ನಾಗಭೂಷಣ್, ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ ಹಾಗೂ ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ ಅವರಿಗೆ ಪ್ರತ್ಯೇಕ ಮನವಿ ಸಲ್ಲಿಸಿ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಒಂದು ವಾರದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಬೇಕು, ತಪ್ಪಿದಲ್ಲಿ ಮುಂದಿನ 10 ದಿನಗಳಲ್ಲಿ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.