ಗುಂಡ್ಲುಪೇಟೆ: ರೈತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟಣದ ತಾಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಸಾಗಿದ ಕಾರ್ಯಕರ್ತರು ಸರ್ಕಾರದ ರೈತ ವಿರೋಧಿ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಕಚೇರಿ ಎದುರು ಸಮಾವೇಶಗೊಂಡು ಕೆಲಕಾಲ ಧರಣಿ ನಡೆಸಿದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಂದಕೆರೆ ಸಂಪತ್ತು ಮಾತನಾಡಿ, ಒಂದು ವರ್ಷದಿಂದ ರಾಜ್ಯದಲ್ಲಿ ಬರ ಮತ್ತು ಮಳೆಯಿಂದ ಬೆಳೆಗಳು ನಾಶವಾಗಿವೆ. ನೈಸರ್ಗಿಕ ವಿಪತ್ತು ಸಂಭವಿಸಿದ್ದರೂ ಅಧಿಕಾರಿಗಳು ಸರ್ಕಾರದಿಂದ ರೈತರಿಗೆ ದೊರಕಬೇಕಾದ ಪರಿಹಾರ ಕೊಡಿಸಲು ಮುಂದಾಗಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಮಾತು ಕೇಳದೆ ದುರಾಡಳಿತ ನಡೆಸುತ್ತಿದ್ದಾರೆ. ತಾಲೂಕು ಕಚೇರಿ ಎದುರೇ ಪ್ರತಿಭಟನೆ ನಡೆಸುತ್ತಿದ್ದರೂ ಸ್ಥಳಕ್ಕೆ ತಹಸೀಲ್ದಾರ್ ಆಗಮಿಸದೆ ರೈತರ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ರೈತರ ಕುಂದುಕೊರತೆಗಳ ಸಭೆಗೆ ಗೈರಾಗುವ ಅಧಿಕಾರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಗುರುಪ್ರಸಾದ್ ಮಾತನಾಡಿ, ಪಟ್ಟಣದಲ್ಲಿ ಸಾರಿಗೆ ಡಿಪೋ ಇದ್ದರೂ ತಾಲೂಕಿನ ಗ್ರಾಮಾಂತರ ಪ್ರದೇಶಗಳಿಗೆ ಸಮರ್ಪಕ ಬಸ್ ಸೌಕರ್ಯ ಕಲ್ಪಿಸುತ್ತಿಲ್ಲ. ರಸ್ತೆಗಳು ಗುಂಡಿ ಬಿದ್ದಿದ್ದರೂ ಲೋಕೋಪಯೋಗಿ ಇಲಾಖೆ ಕನಿಷ್ಠ ಗುಂಡಿಗಳಿಗೆ ಮಣ್ಣು ಮುಚ್ಚಿಸುವ ಕೆಲಸ ಮಾಡುತ್ತಿಲ್ಲ. ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಲೀಡ್ ಬ್ಯಾಂಕ್ ಅಧಿಕಾರಿಗಳನ್ನು ರೈತರು ತರಾಟೆಗೆ ತೆಗೆದುಕೊಂಡರು. ಒಟಿಎಸ್(ಒನ್ ಟೈಮ್ ಸೆಟಲ್‌ಮೆಂಟ್) ಯೋಜನೆಯಲ್ಲಿ ಸಾಲ ತೀರುವಳಿ ಮಾಡಿದ ರೈತರಿಗೆ ಮತ್ತೆ ಬ್ಯಾಂಕ್‌ಗಳು ಸಾಲ ನೀಡಬೇಕು. ರೈತರ ಖಾತೆಗಳಿಗೆ ಜಮೆಯಾಗುವ ಹಾಲಿನ ಬಿಲ್, ಸರ್ಕಾರದ ಸಬ್ಸಿಡಿ ಸೇರಿದಂತೆ ಯಾವುದೇ ಹಣವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ಒತ್ತಾಯಿಸಿದರು.
ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಹೊನ್ನೂರು ಬಸವಣ್ಣ, ತಾಲೂಕು ಅಧ್ಯಕ್ಷ ಹೊಸೂರು ಮಹೇಶ್, ಹಾಲಹಳ್ಳಿ ಮಹೇಶ್, ವೃಷಭೇಂದ್ರ ಇದ್ದರು.