ಕಾರಟಗಿ: ಪದವಿ ಕಾಲೇಜು ಆರಂಭ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಿದ್ದ ಎಸ್‌ಎಫ್‌ಐ ಕಾರ್ಯಕರ್ತರೊಂದಿಗೆ ತಹಸೀಲ್ದಾರ್ ಎಂ.ಕುಮಾರಸ್ವಾಮಿ ಶನಿವಾರ ವಿವಿಧ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದರು.
ಇದನ್ನೂ ಓದಿ:ಸಭೆಗೆ ಗೈರಾದವರ ವಿರುದ್ಧ ಕ್ರಮವಾಗಲಿ
ಎಸ್‌ಎಫ್‌ಐ ತಾಲೂಕಾಧ್ಯಕ್ಷ ಯು.ನಾಗರಾಜ ಮಾತನಾಡಿ, ಪಟ್ಟಣದಿಂದ ದಿನನಿತ್ಯ ನೂರಾರು ವಿದ್ಯಾರ್ಥಿಗಳು ಪದವಿ ಶಿಕ್ಷಣಕ್ಕಾಗಿ ಸಿಂಧನೂರು, ಗಂಗಾವತಿಗೆ ಅಲೆದಾಡುತ್ತಿದ್ದಾರೆ. ಈ ಕುರಿತು ದಶಕಗಳಿಂದ ಬೇಡಿಕೆಯಿದ್ದರೂ ಯಾರೊಬ್ಬರೂ ಗಮನಹರಿಸುತ್ತಿಲ್ಲ. ಅಲ್ಲದೇ, ತಾಲೂಕಿನ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಗಣನೀಯವಾಗಿದ್ದು, ಅಗತ್ಯ ಸೌಕರ್ಯಗಳಿಲ್ಲ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣಕ್ಕಾಗಿ ಪಟ್ಟಣಕ್ಕೆ ಆಗಮಿಸಲು ಸಮಯಕ್ಕೆ ಸರಿಯಾಗಿ ಬಸ್‌ಗಳ ವ್ಯವಸ್ಥೆಯಿಲ್ಲದೆ ಪರದಾಡುವಂತಾಗಿದೆ. ಆದ್ದರಿಂದ ತಾಲೂಕಿನ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದ್ದು, ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗುವ ಆತಂಕ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಹಸೀಲ್ದಾರ್ ಎಂ.ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಪದವಿ ಕಾಲೇಜು ಹಾಗೂ ನೂತನ ಹಾಸ್ಟೆಲ್‌ಗಳ ಆರಂಭಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕೆ ಸಕಾಲದಲ್ಲಿ ಬಸ್ ಸೌಕರ್ಯ ಕಲ್ಪಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು. ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಶಾಲೆಗಳಲ್ಲಿ ಶೌಚಗೃಹ, ಗ್ರಂಥಾಲಯ ಹಾಗೂ ಬಿಸಿಯೂಟದ ಅಡುಗೆ ಕೋಣೆಗಳ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಾಪಂ ಇಒ ಲಕ್ಷ್ಮೀದೇವಿ, ಕೆಪಿಎಸ್ ಕಾಲೇಜು ವಿಭಾಗದ ಪ್ರಾಚಾರ್ಯ ನಾಗರಾಜ, ಸಿಆರ್‌ಪಿಗಳಾದ ತಿಮ್ಮಣ ನಾಯಕ್, ಮಾರುತಿ, ಆರೋಗ್ಯ ಇಲಾಖೆಯ ಹನುಮಪ್ಪ ಗುರಿಕಾರ, ಎಸ್‌ಎಫ್‌ಐ ಉಪಾಧ್ಯಕ್ಷ ಶರೀಫ್, ಸಹ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಇತರರಿದ್ದರು.