ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ಹಾಗೂ ಆರೋಗ್ಯ ಇಲಾಖೆಯಿಂದ ನೀಡಲಾಗುವ ಸೇವೆಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಪ್ರತ್ಯೇಕವಾಗಿ ಉಚಿತ ಸಹಾಯವಾಣಿ ಸ್ಥಾಪಿಸಲು ಚಿಂತನೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ಭ್ರೂಣಲಿಂಗ ಪತ್ತೆ ಮತ್ತು ಹೆಣ್ಣುಭ್ರೂಣ ಹತ್ಯೆ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಹತ್ಯೆ ತಡೆಯಲು ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಯೋಜನೆ ಸಿದ್ಧಪಡಿಸಿ. ಪಿ.ಸಿ ಮತ್ತು ಪಿಎನ್‌ಡಿಟಿ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ, ಸ್ಕ್ಯಾನಿಂಗ್ ಸೆಂಟರ್, ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್‌ಗಳನ್ನು ಅಳವಡಿಸಿ ಎಂದರು.
ಜಿಲ್ಲೆ, ತಾಲೂಕು, ಪಿಎಚ್‌ಸಿ ಮಟ್ಟದಲ್ಲಿ ಅರಿವು ಕಾರ್ಯಕ್ರಮ ಆಯೋಜಿಸಲು ದಿನಾಂಕದೊಂದಿಗೆ ಯೋಜನೆ ಸಿದ್ಧವಾಗಬೇಕು. ಜಿಲ್ಲಾ ಮಟ್ಟದಲ್ಲಿ ಡಿ.20ರಂದು ನಡೆಯುವ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ. ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು. ಆರೋಗ್ಯ ಇಲಾಖೆಯಲ್ಲಿ ಲಭ್ಯವಿರುವ ಐಇಸಿ ಅನುದಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಜಿಲ್ಲೆಯಲ್ಲಿರುವ ಮಹಿಳಾ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಅರಿವು ಕಾರ್ಯಕ್ರಮಗಳಿಗೆ ಆಹ್ವಾನಿಸಿ. ಮೂರು ತಿಂಗಳಿಗೊಮ್ಮೆ ಪಿ.ಸಿ ಮತ್ತು ಪಿಎನ್‌ಡಿಟಿ ಸಮಿತಿ ಸ್ಕ್ಯಾನಿಂಗ್ ಸೆಂಟರ್ ಗೆ ಭೇಟಿ ನೀಡಿ ವರದಿ ನೀಡಬೇಕಿರುತ್ತದೆ. ಸಮಿತಿ ಇನ್ನು ಮುಂದೆ ದಿಢೀರ್ ಭೇಟಿ ನೀಡಿ ವರದಿ ನೀಡಬೇಕು ಎಂದು ವಿವರಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಹೆಣ್ಣುಭ್ರೂಣ ಹತ್ಯೆ ತಡೆಗಟ್ಟಲು ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು. ಇಂತಹ ಕೃತ್ಯ ಕಂಡುಬಂದಲ್ಲಿ ನೇರವಾಗಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಆರೋಗ್ಯ ಇಲಾಖೆಯ ಡಾ. ಬೆಟ್ಟಸ್ವಾಮಿ, ಹಿರಿಯ ವಕೀಲೆ ಜಯಲಕ್ಷ್ಮೀ, ಮಹಿಳಾ ಸಂಘಟನೆ ಸುನಂದಾ ಜಯರಾಂ, ಕುಮಾರಿ ಇತರರಿದ್ದರು.