ಸಂದೀಪ್ ಸಾಲ್ಯಾನ್ ಬಂಟ್ವಾಳ
ಯಥೇಚ್ಛವಾಗಿ ನಿರ್ಬಂಧಿತ ಪ್ಲಾಸ್ಟಿಕ್ ಬಳಸಿ ಬಳಿಕ ರಸ್ತೆ, ನದಿ, ಕಾಲುವೆಗಳಿಗೆ ಎಸೆಯುವ ಪ್ರವೃತ್ತಿ ದಿನದಿಂದ ದಿನಕ್ಕೆ ಮುಂದುವರಿಯುತ್ತಿರುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ.
ಸ್ಥಳೀಯಾಡಳಿತ ಸಂಸ್ಥೆಗಳು ಏನೇ ನಿಯಮ ರೂಪಿಸಿದರೂ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಪರಿಸರವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಸಂಪೂರ್ಣ ಮುಕ್ತಗೊಳಿಸಲು ಸಾಧ್ಯವಾಗುತ್ತಿರಲಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ದಂಡ ವಿಧಿಸುವ ಕಾರ್ಯಾಚರಣೆ ಕೈಗೊಳ್ಳಲು ಹಾಗೂ ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.
ರಸ್ತೆ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸದ ರಾಶಿಗಳು, ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳು ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಪರಿಸರ ಸಂರಕ್ಷಣಾ ಕಾಯ್ದೆ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಕಾಯ್ದೆಯನ್ವಯ 120 ಮೈಕ್ರಾನ್‌ಗಿಂತ ಕಡಿಮೆ ಗಾತ್ರದ ಎಲ್ಲ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣಾ ಹಾಗೂ ಬಳಕೆ ನಿಷೇಧಿಸಲಾಗಿದೆ.
ಎಲ್ಲ ಇಲಾಖೆಗಳ ಸಹಕಾರ
ಈ ನಿಯಮಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಎಲ್ಲ ಇಲಾಖೆಗಳ ಸಹಕಾರ ಅಗತ್ಯ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳಾದ ನಗರ ಪಾಲಿಕೆಗಳು, ಪುರಸಭೆಗಳು, ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿಗಳ ಮೂಲಕ ರಸ್ತೆ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇ ಹಾಗೂ ದಂಡ ವಿಧಿಸುವ ಕಾರ್ಯಾಚರಣೆ ತ್ವರಿತವಾಗಿ ಜಾರಿಗೆ ತರಬೇಕು. ಏಕ ಬಳಕೆಯ ಪ್ಲಾಸ್ಟಿಕ್ ತಯಾರಕರು ಹಾಗೂ ಮಾರಾಟದ ಮೇಲ್ವಿಚಾರಣೆಗೆ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧೀನ ಇಲಾಖೆಗಳಿಗೆ ಸೂಚನೆ ನೀಡಬೇಕು. ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಜಾಗೃತಿ ಮೂಡಿಸುವ ಕಾರ್ಯಕ್ಕೆ ಸಾರ್ವಜನಿಕ ಶಿಕ್ಷಣ ಮತ್ತು ಮಾಧ್ಯಮದ ಜತೆಗೂಡಿ ಅಭಿಯಾನ ಕೈಗೊಳ್ಳಬೇಕು. ತಮ್ಮ ಇಲಾಖೆ ವ್ಯಾಪ್ತಿಯ ಎಲ್ಲ ಕಚೇರಿಗಳು ಮತ್ತು ಘಟಕಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತಕ್ಷಣದಿಂದಲೇ ನಿಷೇಧಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಕಾರ್ಯರೂಪಕ್ಕೆ ಬಾರದ ಕಾರ್ಯಾಚರಣೆ
ಈ ಹಿಂದೆ ಕೆಲವೊಂದು ನಗರ ಪಾಲಿಕೆ, ಪುರಸಭೆಗಳು ತಮ್ಮ ವ್ಯಾಪ್ತಿಯಲ್ಲಿ ಅಂಗಡಿ, ಮಳಿಗೆಗಳಲ್ಲಿ ಕಾರ್ಯಾಚರಣೆ ನಡೆಸಿ 120 ಮೈಕ್ರಾನ್‌ಗಿಂತ ಕಡಿಮೆ ಗಾತ್ರದ ಪ್ಲಾಸ್ಟಿಕ್ ಕೈ ಚೀಲಗಳನ್ನು ವಶಪಡಿಸಿಕೊಂಡ ಪ್ರಕರಣಗಳು ವರದಿಯಾಗಿವೆ. ಆದರೆ ಅಂತಹ ಅಂಗಡಿ, ಮಳಿಗೆಗಳ ಮೇಲೆ ದಂಡ ವಿಧಿಸುವ ಅಥವಾ ಕಾನೂನು ಕ್ರಮ ಕೈಗೊಳ್ಳದೆ, ಪ್ಲಾಸ್ಟಿಕ್ ಬಳಕೆ ಪುನಾರವರ್ತನೆ ಆಗುತ್ತಿರುತ್ತವೆ. ಇದೀಗ ಸರ್ಕಾರವೇ ಕಟ್ಟುನಿಟ್ಟಿನ ಆದೇಶವನ್ನು ಅಧಿಕಾರಿಗಳಿಗೆ ನೀಡಿರುವುದು ಆಶಾದಾಯಕ ಬೆಳವಣಿಗೆ.
ಸರ್ಕಾರದ ಸೂಚನೆ ಮೇರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವ ವ್ಯಕ್ತಿಗಳಿಗೆ ದಂಡ ವಿಧಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಸಹಕಾರ ಪಡೆದು ವಾಹನಗಳಲ್ಲಿ ಬಂದು ಕಸ ಎಸೆಯುವವರನ್ನು ಪತ್ತೆ ಹಚಿ ದಂಡ ವಿಧಿಸುವ ಕಾರ್ಯಚರಣೆಯನ್ನು ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮಾಡುತ್ತಿದ್ದೇವೆ. ವಾಸು ಪೂಜಾರಿ ಬಂಟ್ವಾಳ ಪುರಸಭೆ ಅಧ್ಯಕ್ಷ