ಜಿಲ್ಲೆ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ: ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಕ್ರಮ

ಮೈಸೂರು: ಮೈಸೂರಿನ ರಾಜವಂಶಸ್ಥರ ವಿರೋಧದ ನಡುವೆಯೇ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡದೇವಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಡೆಸಿದರು.


ರಾಜ್ಯ ಸರ್ಕಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದ್ದು, ಇದಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆಗಸ್ಟ್ 22ರಂದು ತಡೆಯಾಜ್ಞೆ ತೆರವುಗೊಂಡಿದೆ. ಇದರ ಬೆನ್ನಲ್ಲೇ ಚಾಮುಂಡಿಬೆಟ್ಟ ದಾಸೋಹ ಭವನದಲ್ಲಿ ಈ ಪ್ರಾಧಿಕಾರದ ಸಭೆ ನಡೆಸುವ ಮೂಲಕ ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.


ಸಭೆಯಲ್ಲಿ ಮಾತನಾಡಿದ ಸಿಎಂ, ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಖಡಕ್ ಎಚ್ಚರಿಕೆ ನೀಡಿದರು.


ಹಿಂದೆಯೂ ಸಮಿತಿ ಇತ್ತು. ಆದರೆ, ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದು ಪ್ರಾಧಿಕಾರ ರಚನೆಯ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.


ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ, ಚರಿತ್ರೆ, ಘನತೆಯನ್ನು ಕಾಪಾಡುವ ಜತೆಗೆ ಉನ್ನತೀಕರಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.


ಮುಲಾಜಿಲ್ಲದೆ ಕ್ರಮ:

ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆಗಳನ್ನು ನಡೆಸಬೇಕು, ಶುಚಿತ್ವಕ್ಕೆ ಆದ್ಯತೆ ನೀಡಬೇಕು. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕು. ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಸಿದರು.


ತಾಯಿ, ಶಕ್ತಿದೇವತೆ ಚಾಮುಂಡಿದೇವಿ ಬಗ್ಗೆ ಕೋಟ್ಯಂತರ ಜನರಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತು ಒದಗಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಯ ಬೇಡಿಕೆ ಇದೆ ಎಂದರು.


ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಜಿ.ಟಿ.ದೇವೇಗೌಡ, ಡಿ.ರವಿಶಂಕರ್, ಕೆ.ಹರೀಶ್‌ಗೌಡ, ಎಂಎಲ್‌ಸಿಗಳಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ವಿವೇಕಾನಂದ ಇತರರಿದ್ದರು.