ಗೋಕಾಕ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಯಾನಂದ ಹುಣಶ್ಯಾಳಿ, ಬಸವರಾಜ ಆರೆನ್ನವರ.  
ಜಿಲ್ಲೆ

ಪ್ರಥಮ ಬಾರಿಗೆ ಬಿಜೆಪಿ ಮಡಿಲಿಗೆ ಗೋಕಾಕ ನಗರಸಭೆ

ಗೋಕಾಕ: ಕಳೆದ ಎರಡು ವರ್ಷದಿಂದ ನನೆೆಗುದಿಗೆ ಬಿದ್ದಿದ್ದ ಗೋಕಾಕ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, ಮೊದಲ ಬಾರಿಗೆ ಗೋಕಾಕ ನಗರಸಭೆ ಬಿಜೆಪಿ ಮಡಿಲಿಗೆ ಸೇರಿದೆ.

ಸಚಿವ ರಮೇಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಬಿಜೆಪಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಜಯಾನಂದ ಹುಣಚ್ಯಾಳಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಬಸವರಾಜ ಅರೆನ್ನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಗರಸಭೆ ಸದಸ್ಯ ಜಯಾನಂದ ಹುಣಚ್ಯಾಳಿ ಮತ್ತು ಪರಿಶಿಷ್ಟ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಅರೆನ್ನವರ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಬೈಲಹೊಂಗಲ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಅವರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದೆ ಎಂದು ಘೋಷಿಸಿದರು.

ಲಿಂಗಾಯತ ಸಮುದಾಯದ ಯುವ ನಾಯಕ ಜಯಾನಂದ ಹುಣಚ್ಯಾಳಿ, ಸಚಿವ ರಮೇಶ ಜಾರಕಿಹೊಳಿ ಬೆಂಬಲಿತ ವಾರ್ಡ್ ನಂ. 15ರಿಂದ 2ನೇ ಬಾರಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರೆ, ಬಸವರಾಜ ಅರೆನ್ನವರ ವಾರ್ಡ ನಂ. 25ರಿಂದ ಮೊದಲನೆಯ ಬಾರಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಆಯ್ಕೆ ಪ್ರಕ್ರಿಯೆ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ನೂತನ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಸಚಿವ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಗೋಕಾಕ ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಉಪಚುನಾವಣೆ ಬಳಿಕ ಅಪರೋಕ್ಷವಾಗಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸುತ್ತಿರುವ ಲಖನ್ ಜಾರಕಿಹೊಳಿ ಅವರು ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸದೆ ರಮೇಶ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳಿಗೆ ಸೂಚಕರಾಗಿ ಸಹಿ ಮಾಡುವ ಮೂಲಕ ಮುಂದೆ ಬಿಜೆಪಿಗೆ ಸೇರುವ ಮುನ್ಸೂಚನೆ ನೀಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.