ಬೆಳಗಾವಿ ನಗರದಲ್ಲಿ ಬುಧವಾರ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಿದರು. ಎಚ್.ಎಂ. ರೇವಣ್ಣ, ಎಸ್.ಆರ್. ಪಾಟೀಲ, ವಿನಯ ನಾವಲಗಟ್ಟಿ, ಮೊಹಮ್ಮದ ರೋಷನ್, ರಾಹುಲ ಶಿಂಧೆ ಇತರರಿದ್ದರು. 
ಜಿಲ್ಲೆ

ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪಲಿ

ಬೆಳಗಾವಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಪ್ರಾರಂಭಿಸಲಾಗಿದೆ ಎಂದು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.

ನಗರದ ಜಿಪಂ ಕಚೇರಿ ಆವರಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರು ಅಧಿಕಾರಿಗಳು ಶ್ರಮಿಸಬೇಕು ಎಂದರು. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಸೌಲಭ್ಯಗಳನ್ನು ಬಹಳಷ್ಟು ಜನರು ಪಡೆದಿದ್ದಾರೆ. ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಬೇಕಿದೆ. ಗ್ಯಾರಂಟಿ ಯೋಜನೆಗಳ ಸಮಿತಿಯ ಕಚೇರಿ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೂ ಯೋಜನೆಗಳು ಮುಟ್ಟಿಸಬೇಕು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿ, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನವರ ಸರ್ಕಾರದಿಂದ ಪಂಚ ಗ್ಯಾರಂಟಿಗಳನ್ನು ನೀಡಲಾಗಿದ್ದು, ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಈಗಾಗಲೇ ಯೋಜನೆಗಳನ್ನು ಜಾರಿಗೊಳಿಸಿ ಒಂದು ವರ್ಷಕ್ಕೂ ಅಧಿಕ ಅವಧಿ ಕಳೆದಿದೆ. ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ದೂರು, ಸಮಸ್ಯೆಗಳಿಗೆ ತಕ್ಷಣವೇ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಸ್ಪಂದಿಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ, ತಾಲೂಕು ಮಟ್ಟದ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ತಾಲೂಕು ಮಟ್ಟದಲ್ಲಿ ಜನರೊಂದಿಗೆ ಸಂವಾದ ನಡೆಸಿ, ಯೋಜನೆಗಳ ಲಾಭ ಎಲ್ಲರಿಗೂ ಸಿಗುವಂತೆ ನೋಡಿಕೊಳ್ಳಬೇಕು ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಜಿಪಂ ಸಿಇಒ ರಾಹುಲ್ ಶಿಂಧೆ, ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ತಾಲೂಕು ಮಟ್ಟದ ಸದಸ್ಯರು ಇದ್ದರು.