ಜಿಲ್ಲೆ

ಸಾವಿನಲ್ಲೂ ಸಾರ್ಥಕತೆ ಮೆರೆದ ಮಾಜಿ ಶಾಸಕ ವಾಸು

ಸದೇಶ್ ಕಾರ್ಮಾಡ್

ಮೈಸೂರು: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ವಾಸು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ವಾಸು ಅವರು 15 ವರ್ಷಗಳ ಹಿಂದೆಯೇ ದೇಹ ದಾನಕ್ಕೆ ಸಹಿ ಮಾಡಿದ್ದರು. ಈ ಪ್ರಕಾರ ಜೆಎಸ್‌ಎಸ್ ಆಸ್ಪತ್ರೆಗೆ ಅವರ ದೇಹವನ್ನು ದಾನ ಮಾಡಲು ಕುಟುಂಬ ವರ್ಗದವರು ತೀರ್ಮಾನಿಸಿದ್ದಾರೆ. ಆ ಮೂಲಕ ವಾಸು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಜಯಲಕ್ಷ್ಮೀಪುರಂನ ನಿವಾಸದಲ್ಲಿ ವಾಸು ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನ ಬಳಿಕ ಜೆಎಸ್‌ಎಸ್ ವೈದ್ಯಕೀಯ ಕಾಲೇಜಿಗೆ ಮೃತದೇಹವನ್ನು ಹಸ್ತಾಂತರಿಸಲಾಗುವುದು.

ವಾಸು ಅವರು ಚಾಮರಾಜ ಕ್ಷೇತ್ರದ ಶಾಸಕರಾಗಿ, ಮೈಸೂರಿನಲ್ಲಿ ನೂತನ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ ಮೈಸೂರಿನ ಕೆ.ಆರ್.ಎಸ್. ರಸ್ತೆಯಲ್ಲಿ ಹೊಸದಾಗಿ ಜಿಲ್ಲಾಸ್ಪತ್ರೆ, ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕಿದ್ವಾಯಿ ಆಸ್ಪತ್ರೆ, ಮಹಾರಾಣಿ ವಾಣಿಜ್ಯ ಕಾಲೇಜಿಗೆ ನೂತನ ಕಟ್ಟಡ ಹೀಗೆ ಅನೇಕ ಅಭಿವೃದ್ಧಿ ಕಾರ್ಯಗಳು ಸಾಕಾರಗೊಳ್ಳಲು ಅಪಾರವಾಗಿ ಶ್ರಮಿಸಿದ್ದರು.

ವೀರಪ್ಪಮೊಯಿಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮೈಸೂರಿನ ಮೇಯರ್ ಆಗಿ ಅತ್ಯುತ್ತಮ ಕಾರ್ಯ ಮಾಡಿದ್ದರು. ಸಹಕಾರ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡು ತಮ್ಮ ಛಾಪು ಮೂಡಿಸಿದ್ದರು. 2002ರಿಂದ ಪ್ರಜಾನುಡಿ ಪತ್ರಿಕೆಯನ್ನು ಮುನ್ನಡೆಸಿ ಅನೇಕ ಯುವ ಪತ್ರಕರ್ತರನ್ನು ಪ್ರೋತ್ಸಾಹಿಸುತ್ತಾ ಪತ್ರಿಕೋದ್ಯಮದಲ್ಲೂ ತಮ್ಮ ಹೆಜ್ಜೆ ಗುರುತು ಮೂಡಿಸಿದ್ದರು.