ಜಿಲ್ಲೆ

ಹೆಸರು ಮಾರ್ಪಾಡು ಮಾಡಿದ್ದಕ್ಕೆ ಭುಗಿಲೆದ್ದ ಆಕ್ರೋಶ: ನ.23ರಂದು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ದೇಶದಲ್ಲೇ ಮಾದರಿಯಾಗಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯ ಯಥಾಸ್ಥಿತಿ ಕಾಪಾಡುವಂತೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ನ.23ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.

ಶಾಲಾ ಶಿಕ್ಷಣ(ಪದವಿಪೂರ್ವ) ಇಲಾಖೆ ಎಂಬುದನ್ನು ಈ ಹಿಂದೆ ಇದ್ದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಎಂದು ಮಾರ್ಪಡಿಸುವಂತೆ ಒತ್ತಾಯಿಸಿ ಹೋರಾಟ ನಡೆಸಲಾಗುತ್ತಿದೆ. ಸರ್ಕಾರ ಇದಕ್ಕೆ ಸ್ಪಂದಿಸದಿದ್ದರೆ ಡಿ.1ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

1971ರ ಜನವರಿಯಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿದ್ದ ಎಸ್.ಬಂಗಾರಪ್ಪ ಹಾಗೂ ಶಿಕ್ಷಣ ಸಚಿವರಾಗಿದ್ದ ಎಂ.ವೀರಪ್ಪಮೊಯ್ಲಿ ದೂರದೃಷ್ಟಿ ಹಾಗೂ ಬದ್ಧತೆಯ ಫಲವಾಗಿ 1992 ಸ್ವತಂತ್ರ ಪದವಿ ಪೂರ್ವ ಶಿಕ್ಷಣ ಇಲಾಖೆ ರೂಪುಗೊಂಡಿತು. ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಹಂತಗಳ ನಡುವೆ ಒಂದು ಸೇತುವಾಗಿ ಗುಣಾತ್ಮಕ ಹಾಗೂ ಸ್ಪರ್ಧಾತ್ಮಕ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವುದರ ಮೂಲಕ ದೇಶಕ್ಕೆ ಮಾದರಿಯಾದ ಶೈಕ್ಷಣಿಕ ವ್ಯವಸ್ಥೆಯಾಗಿ ರೂಪುಗೊಂಡಿದೆ ಎಂದು ಹೇಳಿದರು.

ಭೈರೇಶ್, ಚನ್ನಕೃಷ್ಣ, ಶಿವಪ್ಪ, ನಿರ್ಮಲಾ, ರಾಜೇಗೌಡ, ರವೀಂದ್ರ ಇದ್ದರು.