ಜಿಲ್ಲೆ

ನ.22ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ ಸಮಾವೇಶ: ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ ಹೇಳಿಕೆ

ಮಂಡ್ಯ: ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಉಳಿಸಿ ಅಭಿಯಾನದ ಅಂಗವಾಗಿ 1995ರ ನಂತರ ಪ್ರಾರಂಭವಾದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜಿಗೆ ಅನುದಾನ ನೀಡುವಂತೆ ಒತ್ತಾಯಿಸಿ ನ.22ರಂದು ಹುಬ್ಬಳ್ಳಿಯ ಬಯೋಟೆಕ್ ಭವನದಲ್ಲಿ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ತಿಳಿಸಿದರು.

ಕನ್ನಡ ಶಾಲೆ ಉಳಿಸುವ ನಿಟ್ಟಿನಲ್ಲಿ ಸರ್ಕಾರ ಪ್ರೋತ್ಸಾಹ ನೀಡಬೇಕು. ಕನ್ನಡ ಶಾಲೆಗಳ ಉಳಿವಿಗೆ ಯೋಜನೆ ರೂಪಿಸಿದೆ. ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು ಸರಿಯಲ್ಲ. ಮಕ್ಕಳಿಗೆ ಮೊದಲು ಕನ್ನಡವನ್ನು ಕಲಿಸುವ ಕೆಲಸ ಆಗಬೇಕು. ಆನಂತರ ಸಾಹಿತ್ಯ ಚಟುವಟಿಕೆಯತ್ತ ಗಮನ ಹರಿಸುವುದು ಅಗತ್ಯ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕನ್ನಡ ಶಾಲಾ, ಕಾಲೇಜಿಗೆ ಅನುದಾನ ನೀಡುವಂತೆ ಹಲವು ವರ್ಷದಿಂದ ಒತ್ತಾಯಿಸಿದ್ದರೂ ಸರ್ಕಾರ ಕಣ್ಣೊರೆಸುವ ತಂತ್ರ ಮಾಡುತ್ತಿವೆ. ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ 1985 ರಿಂದ 95ರವರೆಗಿನ ಕನ್ನಡ ಶಾಲೆಗಳಿಗೆ ಅನುದಾನ ನೀಡಿದ್ದರೆ, ಆದರೆ ನಂತರ ಬಂದ ಯಾವುದೇ ಸರ್ಕಾರಗಳು ಅನುದಾನ ನೀಡುವಲ್ಲಿ ನಿರ್ಲಕ್ಷೃ ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿದ್ದೇವೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವುದರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ಅಧ್ಯಕ್ಷ ಬಿ.ಸಿ.ಶಿವಪ್ಪ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಭೈರೇಗೌಡ, ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಕೆ.ಕಾಳೇಗೌಡ, ಜಿಲ್ಲಾಧ್ಯಕ್ಷ ಶಿವಕುಮಾರ್, ಜಯಪ್ರಕಾಶ್, ಸುರೇಶ್ ಇದ್ದರು.