Foundation laying of works 
ಜಿಲ್ಲೆ

ತೆರಿಗೆ ಹಣ ಸದ್ಭಳಕೆಯಿಂದ ಗ್ರಾಮಾಭಿವೃದ್ಧಿ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಗ್ರಾಮ ಪಂಚಾಯಿತಿಗಳಿಗೆ ಬರುವ ತೆರಿಗೆ ಹಣವನ್ನು ಸದ್ಭಳಕೆ ಮಾಡಿಕೊಂಡರೆ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಜಿಲ್ಲಾ ಪಂಚಾಯಿತಿ, ದೇವನಹಳ್ಳಿ ತಾಲೂಕು ಪಂಚಾಯಿತಿಯಡಿ ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸಮಗ್ರ ಅಭಿವೃದ್ಧಿ ಯೋಜನೆಯಡಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳನ್ನು ಆಧುನಿಕ ಮೂಲ ಸೌಕರ್ಯಗಳೊಂದಿಗೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿ ಮೂಲ ಸೌಕರ್ಯಗಳು ಉತ್ತಮವಾಗಿದ್ದರೆ ಅಂತಹ ಗ್ರಾಮಗಳು ಅಭಿವೃದ್ಧಿಯಾಗುತ್ತವೆ. ಗ್ರಾಮ ಸಡಕ್, ನರೇಗಾ ಯೋಜನೆಯಡಿ ಹಲವು ಅಭಿವೃದ್ಧಿ ಕಾರ್ಯಗಳು ಆಗುತ್ತಿವೆ. ಕೆರೆ ಒತ್ತುವರಿ ತೆರವು, ಕೆರೆ ಹೂಳೆತ್ತುವ ಕಾರ್ಯಕ್ರಮ, ಪ್ರತಿಯೊಬ್ಬ ವಿದ್ಯಾರ್ಥಿಗೆ ಗುಣಮಟ್ಟದ ಶಿಕ್ಷಣ ನೀಡುವ ಹಿತದೃಷ್ಟಿಯಿಂದ ಸಿಎಸ್‌ಆರ್ ಅನುದಾನದಡಿ ಸರ್ಕಾರಿ ಶಾಲೆಗಳ ನವೀಕರಣ ಮಾಡುವ ಕಾರ್ಯಗಳು ಈಗಾಗಲೇ ಪ್ರಾರಂಭ ಮಾಡಲಾಗಿದೆ ಎಂದರು.
ಅಣ್ಣೇಶ್ವರ ಗ್ರಾಮಪಂಚಾಯಿತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹತ್ತಿರ ಇರುವುದರಿಂದ ಬಹಳಷ್ಟು ಅಭಿವೃದ್ಧಿ ಕಂಡಿದೆ. ಇಂದು ಅಣ್ಣೇಶ್ವರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸುಮಾರು 11 ಕೋಟಿ ರೂ.ಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳು ಆಲಿಸಿ, ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಸಚಿವರು ಭರವಸೆ ನೀಡಿದರು.