ಮಂಡ್ಯ: ಜಿಲ್ಲಾ ಕೇಂದ್ರದಲ್ಲಿ ಡಾ.ಬಾಬು ಜಗಜೀವನ ರಾಂ ಭವನವನ್ನು ನಿರ್ಮಾಣ ಮಾಡುವಂತೆ ಹಲವಾರು ದಿನಗಳಿಂದ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ 3.80 ಕೋಟಿ ರೂ ವೆಚ್ಚದಲ್ಲಿ ಭವನ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಇಲ್ಲಿನ ವಿವೇಕಾನಂದ ನಗರದಲ್ಲಿ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶಾಸಕ ರವಿಕುಮಾರ್ ಗಣಿಗ ಅವರು ಭವನ ನಿರ್ಮಾಣ ಮಾಡಬೇಕೆಂದು ಹೇಳಿದ್ದರು. ಅದರಂತೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದ್ದು, ಮುಂದಿನ 1 ವರ್ಷದಲ್ಲಿಯೇ ಕಾಮಗಾರಿ ಪೂರ್ಣಗೊಳಿಸಿ ಲೋರ್ಕಾಪಣೆ ಮಾಡಲಾಗುವುದು. ಇದಲ್ಲದೆ ಜಿಲ್ಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ಸ್ಥಳವನ್ನು ನಿಗದಿಪಡಿಸಿ ಹಂತ ಹಂತವಾಗಿ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡಲಾಗುವುದು ಎಂದರು.
ಶಾಸಕ ರವಿಕುಮಾರ್ ಗಣಿಗ ಮಾತನಾಡಿ, ಮಂಡ್ಯ ಜಿಲ್ಲೆಯಾಗಿ 70 ವರ್ಷ ಕಳೆದರೂ ಬಾಬು ಜಗಜೀವನ ರಾಂ ಭವನವಿಲ್ಲ ಎಂದು ಮುಖಂಡರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಅನುದಾನ ನೀಡುವಂತೆ ಸಚಿವ ಚಲುವರಾಯಸ್ವಾಮಿ ಅವರಿಗೆ ಮನವಿ ಮಾಡಿದ್ದೆ. ಅವರು ಸಂಬಂಧಪಟ್ಟ ಸಚಿವರ ಮೇಲೆ ಒತ್ತಡ ಹಾಕಿ ಅನುದಾನ ಕೊಡಿಸಿದ್ದಾರೆ. ಅದರಂತೆ ಉತ್ತಮ ಹಾಗೂ ಗುಣಮಟ್ಟದ ಭವನ ನಿರ್ಮಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಡಾ ಅಧ್ಯಕ್ಷ ನಯೀಂ ಇದ್ದರು.