ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಶಾಸಕ ಮಂತರ್‌ಗೌಡ ಅವರಿಗೆ ಮನವಿ ಸಲ್ಲಿಸಿದರು. ಪ್ರದೀಪ್, ಪ್ರಸನ್ನ, ದಯಾನಂದ, ನಾಗೇಶ್ ಇದ್ದರು. 
ಜಿಲ್ಲೆ

ಸರ್ಕಾರಿ ನೌಕರರ ಎಲ್ಲ ಬೇಡಿಕೆಗಳನ್ನು ಈಡೇರಿಸಿ

ಸೋಮವಾರಪೇಟೆ: ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಶಾಸಕ ಡಾ.ಮಂತರ್‌ಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಿತು.

ಜ.6 ರಂದು ಮಂಡ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈಗಿನ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಬೇಡಿಕೆಗಳ ಈಡೇರಿಕೆಗೆ ಪೂರಕವಾಗಿ ಹೋರಾಟ ಕೈಗೊಳ್ಳುವ ಮುಂಚಿತವಾಗಿ ರಾಜ್ಯದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ನಮ್ಮ ಸಂಘದ ಬೇಡಿಕೆಗಳನ್ನು ಈಡೇರಿಸಲು ಮನವಿ ಸಲ್ಲಿಸಿ ಅವರ ಸಹಕಾರ ಮತ್ತು ಬೆಂಬಲ ಪಡೆಯಲು ಸಭೆ ನಿರ್ಣಯಿಸಿದಂತೆ ಎಲ್ಲ ಶಾಸಕರಿಗೂ ಮನವಿ ಸಲ್ಲಿಸಲಾಗುತ್ತಿದೆ ಎಂದು ಅಧ್ಯಕ್ಷ ಪ್ರದೀಪ್ ತಿಳಿಸಿದರು.

ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.

ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸುವುದು, ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು, ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್‌ಎಸ್) ಅನುಷ್ಠಾನಗೊಳಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಪರಿಹರಿಸಬೇಕೆಂದು ಶಾಸಕರಿಗೆ ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಜ.25ರಂದು ಜಿಲ್ಲೆಗೆ ರಾಜ್ಯದ ಮುಖ್ಯಮಂತ್ರಿ ಆಗಮಿಸುತ್ತಿದ್ದು, ಈ ಸಂದರ್ಭ ಅವರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಮಾಡಿಕೊಡಲು ಪ್ರಯತ್ನಿಸಲಾಗುವುದು. ಅಂದು ನಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿ ಎದುರು ಮಾತನಾಡಿ ಬಗೆಹರಿಸಿಕೊಳ್ಳಬೇಕೆಂದರು.

ಸಂಘದ ತಾಲೂಕು ಘಟಕದ ಗೌರವ ಅಧ್ಯಕ್ಷ ಪ್ರಸನ್ನ, ಉಪಾಧ್ಯಕ್ಷ ದಯಾನಂದ, ಪ್ರಧಾನ ಕಾರ್ಯದರ್ಶಿ ಎನ್.ಎಂ.ನಾಗೇಶ್, ಖಜಾಂಚಿ ದಿನೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಕೆ.ಬಸವರಾಜು ಸೇರಿದಂತೆ ಹಲವರು ಇದ್ದರು.