ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗೆ ಮೈಸೂರಿನಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. 
ಜಿಲ್ಲೆ

ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಗೆ ಸಕಲ ಸಿದ್ಧತೆ

ಮೈಸೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗಾಗಿ ನ.15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶವಿಲ್ಲದಂತೆ ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ಪರೀಕ್ಷೆಯ ಸಿದ್ಧತೆಗಳ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್‌ರೆಡ್ಡಿ ಅಧ್ಯಕ್ಷತೆಯಲ್ಲಿ ಶನಿವಾರ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ವಿವಿಧ ಇಲಾಖೆಗಳ ಸಿದ್ಧತೆಗಳನ್ನು ಪರಿಶೀಲಿಸಿ, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದಲ್ಲಿ ನಡೆಯಲಿರುವ ಈ ಪರೀಕ್ಷೆಗೆ ಒಟ್ಟು 14,874 ಅಭ್ಯರ್ಥಿಗಳು ಹಾಜರಾಗಲಿದ್ದು, 32 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆ, ಅಗತ್ಯ ಮೂಲಸೌಕರ್ಯವನ್ನು ಸಮರ್ಪಕವಾಗಿ ಕಲ್ಪಿಸಬೇಕು. ಕೆಪಿಎಸ್‌ಸಿ ಮಾರ್ಗಸೂಚಿಯಲ್ಲಿನ ಎಲ್ಲ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.

ಪರೀಕ್ಷೆಯು ಎರಡು ಪತ್ರಿಕೆಗಳಲ್ಲಿ ನಡೆಯಲಿದೆ. ಪತ್ರಿಕೆ-1ರ ಪರೀಕ್ಷೆ ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಪತ್ರಿಕೆ-2ರ ಪರೀಕ್ಷೆ ಮಧ್ಯಾಹ್ನ 2ರಿಂದ ಸಂಜೆ 4ರವರೆಗೆ ನಡೆಯಲಿದೆ. ಪರೀಕ್ಷಾರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವಂತೆ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

200 ಮೀಟರ್ ನಿರ್ಬಂಧಿತ ಪ್ರದೇಶ:

ಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶವಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಸೆಕ್ಷನ್ 163ರ ಅಡಿಯಲ್ಲಿ ಆದೇಶ ಹೊರಡಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಶ್ನೆ ಪತ್ರಿಕೆ ಸಾಗಣೆಗೆ ಶಸ್ತ್ರಸಜ್ಜಿತ ಭದ್ರತೆ:

ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಉತ್ತರ ಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಶಸ್ತ್ರಸಜ್ಜಿತ ಎಂಟು ಮಂದಿ ಗನ್‌ಮ್ಯಾನ್‌ಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕಾರ್ಯದಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಒಟ್ಟು 32 ಸ್ಥಳೀಯ ನಿರೀಕ್ಷಣಾಧಿಕಾರಿಗಳನ್ನು ನೇಮಿಸಲಾಗಿದೆ. ಇದರೊಂದಿಗೆ ಎಂಟು ವೀಕ್ಷಕರು ಹಾಗೂ ಎಂಟು ಮಾರ್ಗಾಧಿಕಾರಿಗಳನ್ನು ನಿಯೋಜಿಸಿ ಪರೀಕ್ಷೆಯ ಪ್ರತಿಯೊಂದು ಹಂತದ ಮೇಲ್ವಿಚಾರಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಅಭ್ಯರ್ಥಿಗಳಿಗೆ ಸಾರಿಗೆ ವ್ಯವಸ್ಥೆ:

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ನಿರಂತರ ವಿದ್ಯುತ್ ಪೂರೈಕೆಯಾಗುವಂತೆ ಸೆಸ್ಕ್ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಪರೀಕ್ಷಾ ಅವಧಿಯಲ್ಲಿ ಯಾವುದೇ ವೈದ್ಯಕೀಯ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಸ್ಪಂದಿಸಲು ಆರೋಗ್ಯ ಇಲಾಖೆಯಿಂದ ಅಗತ್ಯ ವೈದ್ಯಕೀಯ ತುರ್ತು ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ಮಹಾನಗರ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪರೀಕ್ಷೆಯ ಸುಗಮ ನಿರ್ವಹಣೆಗೆ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳುವುದರ ಜತೆಗೆ, ಪರೀಕ್ಷೆಯ ಪಾವಿತ್ರೃತೆ ಮತ್ತು ಪಾರದರ್ಶಕತೆಯನ್ನು ಕಾಪಾಡಬೇಕು. ಕೆಪಿಎಸ್‌ಸಿ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸಿ, ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಲು ಎಲ್ಲ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಕೆ.ಎಸ್. ಸುಂದರ್‌ರಾಜ್, ಉಪವಿಭಾಗಾಧಿಕಾರಿ ಆಶಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಡಿ. ಉದಯ್ ಕುಮಾರ್ ಹಾಗೂ ಇತರರು ಪಾಲ್ಗೊಂಡಿದ್ದರು.