ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ ರಾಜ್ಯ ಸರ್ಕಾರ ನಡೆಸುವ ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ. ಮಾತ್ರವಲ್ಲ ಕೇಂದ್ರ ಸರ್ಕಾರದಿಂದ ಸಿಗಬೇಕಾದ ಎಲ್ಲ ನೆರವು ಒದಗಿಸಲು ನಾನು ಬದ್ಧನಿದ್ದೇನೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಭರವಸೆ ನೀಡಿದರು.
ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ಅರಣ್ಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಲೆನಾಡಿನ ಜನರು ಅರಣ್ಯ ಹಾಗೂ ಕಂದಾಯ ಭೂಮಿ ಗೊಂದಲದಲ್ಲಿ ನರಳುತ್ತಿದ್ದಾರೆ. ಅದರಲ್ಲೂ ನಾಡಿಗಾಗಿ ಬದುಕನ್ನು ತ್ಯಾಗ ಮಾಡಿದ ಶರಾವತಿ ಸಂತ್ರಸ್ತರಿಗೆ ಯಾವ ಸರ್ಕಾರವೂ ನ್ಯಾಯ ನೀಡಲು ಸಾಧ್ಯವಾಗಿಲ್ಲ ಎಂಬುದು ನೋವಿನ ಸಂಗತಿ ಎಂದರು.
ಲಿಂಗನಮಕ್ಕಿ ಜಲಾಶಯ ನಿರ್ಮಾಣ ಮಾಡಲು ಜಮೀನು ನೀಡಿದ ರೈತರಿಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿ ಶರಾವತಿ ಸಂತ್ರಸ್ತರಿಗೆ ಭೂಮಿ ಖಾತೆ ಮಾಡಿಕೊಡಲು ಡಿನೋಟಿಫಿಕೇಶನ್ ಮಾಡಲಾಗಿತ್ತು. ಆದರೆ ಕೆಲವರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಈಗ ಕಾನೂನು ತೊಡಕು ನಿವಾರಿಸಿಕೊಳ್ಳಲು ಮಧ್ಯಂತರ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗಲಿದೆ ಎಂದು ಹೇಳಿದರು.
ಸರ್ಕಾರಿ ಜಮೀನುಗಳಲ್ಲಿ ತಮ್ಮ ಜೀವನೋಪಾಯಕ್ಕಾಗಿ ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿರುವ ಬಗರ್‌ಹುಕುಂ ಸಾಗುವಳಿದಾರರಿಗೆ ಶೀಘ್ರವೇ ಹಕ್ಕುಪತ್ರ ನೀಡುವ ಸಂಬಂಧ ಕಂದಾಯ ಮತ್ತು ಅರಣ್ಯ ಇಲಾಖೆಗಳು ಜಂಟಿಯಾಗಿ ಸರ್ವೇ ನಡೆಸಿ ಗಡಿ ಗುರುತಿಸಬೇಕು. ಈ ಸಂಬಂಧ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಆರಗ ಜ್ಞಾನೇಂದ್ರ ಮತ್ತಿತರರು ಇದ್ದರು.