ಜಿಲ್ಲೆ

ಜೆ.ಜಿ. ಕಾಮರ್ಸ್ ಕಾಲೇಜಿನಲ್ಲಿ ಪುನರ್ವಿುಲನ ಕಾರ್ಯಕ್ರಮ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಇಲ್ಲಿನ ಕೆಎಲ್​ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ (ಜೆ.ಜಿ. ಕಾಮರ್ಸ್) ಮಹಾವಿದ್ಯಾಲಯದ ಅಮೃತ ಮಹೋತ್ಸವ ಸವಿನೆನಪಿಗಾಗಿ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಫೆ. 2ರಂದು ಬೆಳಗ್ಗೆ 10 ಗಂಟೆಗೆ ‘ಪುನರ್ವಿುಲನ’ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಂ.ಆರ್. ಪಾಟೀಲ, 75 ವರ್ಷಗಳನ್ನು ಕಂಡಿರುವ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇದುವರೆಗೆ 56 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದಾರೆ ಎಂದರು.

ಇಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ದೇಶದ ಅತ್ಯುನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೆಕ್ಕಪರಿಶೋಧಕರು, ಶಿಕ್ಷಕರು, ದಕ್ಷ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳಲ್ಲಿ ಇಲ್ಲಿನ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯಕ್ಕೆ ಮುಖ್ಯಮಂತ್ರಿಯನ್ನು ನೀಡಿದ ಹೆಮ್ಮೆಯೂ ಈ ಮಹಾವಿದ್ಯಾಲಯಕ್ಕೆ ಇದೆ ಎಂದು ತಿಳಿಸಿದರು.

ಫೆ.2ರಂದು ಬೆಳಿಗ್ಗೆ 8 ರಿಂದ ಸಂಜೆ 6.30 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಗ್ಗೆ 8 ಗಂಟೆಗೆ ಹಳೇ ವಿದ್ಯಾರ್ಥಿಗಳ ನೋಂದಣಿ ಪ್ರಾರಂಭಿಸಲಾಗುವುದು. 2,200 ಜನ ಹಳೇ ವಿದ್ಯಾರ್ಥಿಗಳು ಈಗಾಗಲೇ ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಕಾರ್ಯಕ್ರಮಕ್ಕೆ 3,500 ಜನ ಹಳೇ ವಿದ್ಯಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ಬೆಳಗ್ಗೆ 10 ಗಂಟೆಗೆ ಪುನರ್ವಿುಲನ ವೇದಿಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ನಿವೃತ್ತ ಮುಖ್ಯ ನ್ಯಾಯಾಧೀಶರಾದ ಸುಭಾಷ ಅಡಿ, ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ್, ಆಂದ್ರಪ್ರದೇಶದ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ, ಶಾಸಕ ಶ್ರೀನಿವಾಸ ಮಾನೆ, ವಿಆರ್​ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆನಂದ ಸಂಕೇಶ್ವರ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು. ಶಾಸಕ ಎಂ.ಆರ್. ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

99 ವರ್ಷದ ಹಳೇ ವಿದ್ಯಾರ್ಥಿ ಎಸ್.ಎಸ್. ಹಿರೇಮಠ ಹಾಗೂ 1953ನೇ ಬ್ಯಾಚಿನ ರ್ಯಾಂಕ್ ವಿದ್ಯಾರ್ಥಿ ಎಂ.ಎಸ್. ಬಸವರಾಜ ಉಪಸ್ಥಿತರಿರುವರು ಎಂದು ತಿಳಿಸಿದರು.

ಅಂದು ಮಧ್ಯಾಹ್ನ 3ರಿಂದ 5.30 ರವರೆಗೆ ಸಾಂಸೃ್ಕಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ನಂತರ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಹಾಲಿ ಉದ್ಯಮಿಗಳು, ವಿದ್ಯಾರ್ಥಿಗಳೊಂದಿಗೆ ಚರ್ಚಾಕೂಟ ಏರ್ಪಡಿಸಲಾಗಿದೆ ಎಂದರು.

ಲೆಕ್ಕ ಪರೊಶೋಧಕರಿಂದ ಅಮೃತ ಮಹೋತ್ಸವ ನೆನಪಿಗಾಗಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುವುದು. ಇದಕ್ಕೂ ಮೊದಲು ಫೆ.1 ರಂದು ಮಹಾವಿದ್ಯಾಲಯದ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಅಂಗಾಂಗ ದಾನ ಶಿಬಿರ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಬಡವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಬೇಕಾದ ಸಹಾಯವನ್ನು ಹಳೇ ವಿದ್ಯಾರ್ಥಿಗಳ ಸಂಘದಿಂದ ಮಾಡಲಾಗುತ್ತಿದೆ ಎಂದು ಹೇಳಿದರು.

ಸಂಘದ ಖಜಾಂಚಿ ಬಾಬಾ ಬೂಸದ, ಪ್ರಾಚಾರ್ಯ ಪ್ರೊ. ಎಸ್.ಎಲ್. ಪಾಟೀಲ, ಸಿಎ ಸುರೇಶ ಚೆನ್ನಿ, ಡಾ. ಡಿ.ಕೆ. ವಾಘಮೋಡೆ, ಬಿ.ಎಸ್. ಮಾಳವಾಡ, ವೀರಣ್ಣ ಕುಬಸದ, ಸುನೀಲ ದೇವರಡ್ಡಿ, ಎಸ್.ವಿ. ಐಹೊಳೆ ಸುದ್ದಿಗೋಷ್ಠಿಯಲ್ಲಿ ಇದ್ದರು.