ಜಿಲ್ಲೆ

ಸಫಾಯಿ ಕರ್ಮಚಾರಿಗಳಿಗಿರುವ ಯೋಜನೆಗಳ ಸೌಲಭ್ಯ ಅರ್ಹರಿಗೆ ತಲುಪಲಿ: ಭರತ್ ಎಸ್

Gadag - Shivanand Hiremath

ಗದಗ: ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಇರುವ ಸೌಲಭ್ಯ ತಲುಪಿಸುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಸಫಾಯಿ ಕರ್ಮಚಾರಿಗಳಿಗೆ ದೊರಕಬೇಕಾದ ವಿವಿಧ ಸೌಲಭ್ಯಗಳನ್ನು ಒದಗಿಸುವಲ್ಲಿ ಕ್ರಮ ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸಫಾಯಿ ಕರ್ಮಚಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ನಿಗದಿಪಡಿಸಿದ ವೇತನ ಪಾವತಿಸುವುದು ಹಾಗೂ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು ಅಧಿಕಾರಿಗಳು ಮಾಡಬೇಕು. ಗುತ್ತಿಗೆ ಸಫಾಯಿ ಕರ್ಮಚಾರಿಗಳಿಗೆ ಗುತ್ತಿಗೆ ಏಜೆನ್ಸಿದಾರರು ಸಮಯಕ್ಕೆ ಸರಿಯಾಗಿ ನಿಗದಿಪಡಿಸಿದ ವೇತನ ಸೌಲಭ್ಯಗಳನ್ನು ವಿತರಿಸುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಹಾಗೂ ವೇತನದೊಂದಿಗೆ ಇ.ಎಸ್.ಐ ಪಿಎಫ್ ಪಾವತಿಸುವ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ ಮಾತ್ರವೇ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದರು. ಸ್ವಚ್ಛತಾ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ಬಳಕೆ ಮಾಡುವ ತಿಳುವಳಿಕೆಯ ನೀಡುವುದು ಮುಖ್ಯವಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಸೂಚಿಸಿದರು.

ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ಮಹೇಶ ಪೋತದಾರ ಅವರು ಮಾತನಾಡಿ ದಿ. 21-12-2023 ರಂದು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳಲ್ಲಿ ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳ ಬಗ್ಗೆ ಮಾಹಿತಿ ಹಾಗೂ ತರಬೇತಿ ಕಾರ್ಯಾಗಾರವನ್ನು ಜರುಗಿಸಲಾಗಿದೆ. ಹಾಗೂ ಅವಶ್ಯಕ ಸುರಕ್ಷತಾ ಪರಿಕರಗಳನ್ನು ವಿತರಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಮತ್ತೊಂದು ಕಾರ್ಯಾಗಾರವನ್ನು ಏರ್ಪಡಿಸಿ ಪೌರ ಕಾರ್ಮಿಕರಲ್ಲಿ ಜಾಗೃತಿ ಮೂಡಿಸಲಾಗುವುದೆಂದು ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಿತಿಯ ಸದಸ್ಯರುಗಳು ಹಾಜರಿದ್ದರು.