ಗದಗ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಮತ್ತು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಇತರೆ ಹುದ್ದೆಗಳಿಗೆ ನೇಮಕಾತಿ ಸಂಬಂಧ ನವೆಂಬರ್ 19 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ (ಪತ್ರಿಕೆ -1) ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ( ಪತ್ರಿಕೆ-2) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 16 ಪರೀಕ್ಷಾ ಕೇಂದ್ರದ ಸುತ್ತಲೂ ಜನೆವರಿ 19 ರಂದು ಬೆ. 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ 200 ಮೀಟರ್ ಪ್ರದೇಶವನ್ನು ನಿಷೇದಿತ ಪ್ರದೇಶವನ್ನಾಗಿ ಘೋಷಿಸಲಾಗಿದೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚುಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್ ಸ್ಟಾಲ್ ಫೋಟೋ ಕಾಪಿಯರ್‍ಗಳನ್ನು ಬಂದ ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.