ಗದಗ: ಜಿಲ್ಲೆಯಲ್ಲಿ ಜೂನ್ 30 ರಂದು ಜರುಗುವ ಶಿಕ್ಷಕರ ಅರ್ಹತಾ ಪರೀಕ್ಷೆ ( ಟಿ ಇ ಟಿ) ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಟಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು. ಟಿಇಟಿ ಪರೀಕ್ಷೆಯು ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದ್ದು ಪರೀಕ್ಷಾ ಅವಧಿಯಲ್ಲಿ ಸಮಯ ಪರಿಪಾಲನೆ ಅತೀ ಮುಖ್ಯವಾಗಿದ್ದು ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಯಾವುದೇ ಅಕ್ರಮ, ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ ಅವರು ಮಾತನಾಡಿ ಟಿ ಇ ಟಿ ಪರೀಕ್ಷೆಯು ಜೂನ್ 30 ರಂದು ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ಪ್ರಥಮ ಅಧಿವೇಶನ ಬೆ 9.30 ರಿಂದ ಮ 12 ಗಂಟೆಯವರೆಗೆ ಹಾಗೂ ದ್ವಿತೀಯ ಅಧಿವೇಶನ ಮಧ್ಯಾಹ್ನ 2 ರಿಂದ 4.30 ಜರುಗಲಿದೆ. ಅಧಿವೇಶನ -1 ರ ಪರೀಕ್ಷೆ 11 ಕೇಂದ್ರಗಳಲ್ಲಿ ಹಾಗೂ ಅಧಿವೇಶನ-2 ರ ಪರೀಕ್ಷೆ 17 ಕೇಂದ್ರಗಳಲ್ಲಿ ನಡೆಯಲಿದೆ ಎಂದರು.
ಪ್ರಥಮ ಅಧಿವೇಶನದಲ್ಲಿ 2716 ಅಭ್ಯರ್ಥಿಗಳು ಹಾಗೂ ದ್ವಿತೀಯ ಅಧಿವೇಶನದಲ್ಲಿ 4612 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ 9 ಮಾರ್ಗಗಳನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮಾರ್ಗಾಧಿಕಾರಿಗಳಿಗೆ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಿಗೆ ಮತ್ತು ಸ್ಥಾನಿಕ ಜಾಗೃತದಳದ ಅಧಿಕಾರಿಗಳ ನೇಮಕಾತಿ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ.ರಡ್ಡೇರ ಸಭೆಗೆ ವಿವರಿಸಿದರು.
ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ ಬಂದೋಬಸ್ತ್, ಮಾರ್ಗಾಧಿಕಾರಿಗಳ ವಾಹನಕ್ಕೆ ಎಸ್ಕಾರ್ಟ ವ್ಯವಸ್ಥೆ , ತುರ್ತು ಆರೋಗ್ಯ ತಪಾಸಣೆಗೆ ಸೂಕ್ತ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಡಯಟ್ ಪ್ರಾಚಾರ್ಯರಾದ ಜಿ.ಎಲ್. ಬಾರಾಟಕ್ಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.