ಶಿರಹಟ್ಟಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸಿದರು.  
ಗದಗ

ಆರ್ಥಿಕ ಅಸಮಾನತೆ ನಿವಾರಣೆಗೆ ಸಂವಿಧಾನ ಅವಶ್ಯ Constitution

ಶಿರಹಟ್ಟಿ: ಸಂವಿಧಾನದ (Constitution) ಅವಶ್ಯಕತೆ ಭಾರತೀಯರಿಗೆ ಅತ್ಯಗತ್ಯವಾಗಿದೆ. ಇದು ಪ್ರತಿಯೊಬ್ಬ ನಾಗರಿಕನಿಗೆ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಖಾತರಿಪಡಿಸುತ್ತದೆ. ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಹೋಗಲಾಡಿಸುವ ಸಾಧನವಾಗಿದೆ ಎಂದು ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎ. ಬಳಿಗೇರ ಹೇಳಿದರು.
ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ತಾಪಂ, ಪಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಸಂವಿಧಾನವು ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಭಾರತವನ್ನು ಒಂದುಗೂಡಿಸುವ ಮೂಲಭೂತ ಕಾನೂನಾಗಿದೆ. ಸರ್ಕಾರಕ್ಕೆ ಮಾರ್ಗದರ್ಶನ ನೀಡುತ್ತದೆ ಮತ್ತು ಸಾಮಾನ್ಯ ಜನರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಸಂವಿಧಾನ ಮುಖ್ಯವಾದ ಆಧಾರ ಸ್ತಂಭವಾಗಿದೆ ಎಂದರು.
ಶಾಸಕ ಡಾ. ಚಂದ್ರು ಲಮಾಣಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದು ಕೋಡ್ ಬಿಲ್ ವೈಫಲ್ಯ, ಮಹಿಳಾ ಹಕ್ಕುಗಳ ಕುರಿತು ಅಂಬೇಡ್ಕರ್ ಅವರು ಸಿದ್ಧಪಡಿಸಿದ್ದ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲು ಅಂದಿನ ಸರ್ಕಾರವು ವಿಳಂಬ ಮಾಡಿದ್ದಕ್ಕಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಕಾನೂನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವಾಯಿತು ಎಂದರು.
ಉಪ ತಹಸೀಲ್ದಾರ್ ಎಚ್.ಎಂ. ಪೂಜಾರಿ, ತಾಪಂ ಇಒ ರಾಮಣ್ಣ ದೊಡ್ಡಮನಿ, ಪಪಂ ಮುಖ್ಯಾಧಿಕಾರಿ ಸವಿತಾ ತಾಮ್ರೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲ ಲಮಾಣಿ, ಡಿ.ಕೆ. ಹೊನ್ನಪ್ಪನವರ, ಬಿಇಒ ಎಚ್.ಎನ್. ನಾಯಕ, ಪ್ರಾಚಾರ್ಯ ಉಮೇಶ ಅರಹುಣಸಿ, ಸಂದೀಪ ಕಪ್ಪತ್ತನವರ, ಜಾನು ಲಮಾಣಿ, ನಾಗರಾಜ ಲಕ್ಕುಂಡಿ, ಇತರರಿದ್ದರು.