ರೋಣ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಒ ಚಂದ್ರಶೇಖರ ಕಂದಕೂರ ಮಾತನಾಡಿದರು. ಸಹಾಯಕ ಲೆಕ್ಕಾಧಿಕಾರಿ ದೇವರಾಜ ಇದ್ದರು.
- ರೋಣ ತಾಪಂ ಇಒ ಚಂದ್ರಶೇಖರ ಕಂದಕೂರ ಸೂಚನೆ
- ಪ್ರಗತಿ ಪರಿಶೀಲನಾ ಸಭೆ
ರೋಣ: ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ತಾಲೂಕ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಿದ್ದ ಕುಡಿಯುವ ನೀರಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಬೇಸಿಗೆ ಸಂದರ್ಭದಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ, ಪ್ರತಿಯೊಬ್ಬ ಅಧಿಕಾರಿಯೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಡಿಬಿಒಟಿ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಪಿಡಿಒಗಳು ನಿರಂತರ ನಿಗಾ ವಹಿಸಬೇಕು. ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಗ್ರಾಮಗಳಿಗೆ ಭೇಟಿ ನೀಡಿ ನೀರು ಸರಬರಾಜು ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಬೇಕು. ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬಂದ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಕೆಲವು ಗ್ರಾಮಗಳಲ್ಲಿ ಬೋರ್‌ವೆಲ್‌ಗಳ ನೀರಿನ ಮಟ್ಟ ಕುಸಿತ, ಮೋಟಾರ್ ದೋಷ, ವಿದ್ಯುತ್ ಸಮಸ್ಯೆ ಹಾಗೂ ಪೈಪ್‌ಲೈನ್ ದುರಸ್ತಿ ಸಮಸ್ಯೆಗಳಿಂದ ಕುಡಿಯುವ ನೀರಿನ ವ್ಯತ್ಯಯ ಉಂಟಾಗುತ್ತಿರುವ ಕುರಿತು ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲಿ ತ್ವರಿತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು. ನೀರು ಸರಬರಾಜಿನಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ನರೇಗಾ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು, ಉದ್ಯೋಗ ಸೃಷ್ಟಿ, ಕೆರೆ ಅಭಿವೃದ್ಧಿ, ನೀರು ಸಂರಕ್ಷಣೆ ಸೇರಿ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮ ಪಂಚಾಯಿತಿಗಳಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾರ್ಯಗಳನ್ನು ಗಡುವಿನೊಳಗೆ ಪೂರ್ಣಗೊಳಿಸುವಂತೆ ತಾಪಂ ಇಒ ಚಂದ್ರಶೇಖರ ಕಂದಕೂರ ಸೂಚಿಸಿದರು.
ಸಭೆಯಲ್ಲಿ ತಾಪಂ ಸಹಾಯಕ ಲೆಕ್ಕಾಧಿಕಾರಿ ದೇವರಾಜ, ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒ, ವಾಟರ್‌ಮನ್‌ಗಳು , ನರೇಗಾ ಸಿಬ್ಬಂದಿ ಇದ್ದರು.