ಜಿಲ್ಲೆ

ಆರೋಗ್ಯವಂತ ಸಮಾಜ ನಿರ್ಮಿಸಲು ಮುಂದಾಗಿ

ಎ. ಆರ್. ರಘುರಾಮ

ಗಂಡಸಿ : ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ಮಹಿಳೆಯರ ಸಹಕಾರ ಬಹಳ ದೊಡ್ಡದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಜಯಶ್ರೀ ಹೇಳಿದರು.
ಹುರುಗಿಲವಾಡಿ ಗ್ರಾಮದ ಸಮುದಾಯ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆಯ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಅಪೌಷ್ಟಿಕತೆ ನಿವಾರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಷ್ಟ್ರೀಯ ಪೋಷಣೆ ಅಭಿಯಾನದ ಅಡಿ ಹಲವು ಚಟುವಟಿಕೆಗಳನ್ನು ಮಾಡುತ್ತಿವೆ. ಈ ಯೋಜನೆಯಿಂದ ದೊರೆಯುವ ಸವಲತ್ತುಗಳನ್ನು ಅರ್ಹರು ಬಳಸಿಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ಮಾತೆಯರು ಹೆಚ್ಚು ಕಾಳಜಿ ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸರ್ಕಾರದ ವಿವಿಧ ಯೋಜನೆಗಳು ಯಶಗೊಳ್ಳಬೇಕು ಎಂದರೆ ಅದರಲ್ಲಿ ಮಹಿಳೆಯರ ಸೇವೆ ಮತ್ತು ಕಳಕಳಿ ಅನನ್ಯವಾಗಿದೆ. ಈ ನಿಟ್ಟಿನಲ್ಲಿ ಸದೃಢ ಭಾರತ ನಿರ್ಮಿಸಲು ಮುಂದಾಗಬೇಕು ಎಂದು ಅವರು ಸ್ವಸಹಾಯ ಸಂಘದ ಸದಸ್ಯರಿಗೆ ಸಲಹೆ ನೀಡಿದರು. ಗ್ರಾಪಂ ಮಾಜಿ ಅಧ್ಯಕ್ಷ ಬಾಬು ಅಧ್ಯಕ್ಷತೆ ವಹಿಸಿದ್ದರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ಸಾಕಮ್ಮ, ಆಶಾ, ಇಂದ್ರಾ, ಭಾರತಿ, ಇಂದ್ರಮ್ಮ, ಪೋಷಣ್ ಅಭಿಯಾನದ ಮೇಲ್ವಿಚಾರಕರಾದ ಮಂಜುನಾಥ, ಆರೋಗ್ಯ ಇಲಾಖೆ ಸಿಬ್ಬಂದಿ ರಾಮ ನಾಯಕ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಹಾಜರಿದ್ದರು.