ಗಂಗಾವತಿ: ದುಶ್ಚಟಗಳಿಗೆ ಬಲಿಯಾಗುತ್ತಿರುವ ಯುವ ಸಮುದಾಯ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಎಎಸ್ಪಿ ಹೇಮಂತಕುಮಾರ ಹೇಳಿದರು.
ತಾಲೂಕಿನ ವಡ್ಡರಹಟ್ಟಿಯ ಕಿಷ್ಕಿಂಧಾ ಪಿಯು ಕಾಲೇಜಿನಲ್ಲಿ ಪೊಲೀಸ್ ಇಲಾಖೆ ನಗರ ಠಾಣೆಯಿಂದ ಗುರುವಾರ ಹಮ್ಮಿಕೊಂಡಿದ್ದ ಮಾದಕ ವ್ಯಸನ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾದಕ ವಸ್ತುಗಳ ಬಳಕೆಯಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಕಳೆದುಕೊಳ್ಳುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ತಂಬಾಕು ಪ್ರೇರಿತ ಮಾದಕ ವಸ್ತುಗಳ ಬಳಕೆ ಮತ್ತು ಮದ್ಯಪಾನದಿಂದ ದೂರವಿರಬೇಕಿದ್ದು, ಇಂತಹ ಪ್ರಕರಣ ಕಂಡುಬಂದಲ್ಲಿ ಪೊಲೀಸರ ಗಮನಕ್ಕೆ ತರಬೇಕು. ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣ ಹೆಚ್ಚುತ್ತಿದ್ದು, ದುಶ್ಚಟಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳುವಂತೆ ಸಲಹೆ ನೀಡಿದರು.
ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್ ಮಾತನಾಡಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೊಲೀಸರೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕಿದ್ದು, ದುಶ್ಚಟಗಳಿಂದ ದೂರವಿರುವ ಬಗ್ಗೆ ವಿದ್ಯಾರ್ಥಿಗಳು ಸ್ವಯಂಪ್ರೇರಿತ ಪ್ರಮಾಣ ಕೈಗೊಳ್ಳಬೇಕಿದೆ. ಕುಟುಂಬದ ಗೌರವ ಕಳೆಯುವ ಮಾದಕವಸ್ತುಗಳಿಂದ ವಿದ್ಯಾರ್ಥಿಗಳು ದೂರವಿರುವಂತೆ ಸಲಹೆ ನೀಡಿದರು.
ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲಾಗುವ ಪರಿಣಾಮ ಕುರಿತು ಉಪವಿಭಾಗ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಈಶ್ವರ ಸವಡಿ ಮಾತನಾಡಿದರು. ನಗರ ಪಿಐ ಪ್ರಕಾಶ ಮಾಳೆ, ಕಾಲೇಜು ಆಡಳಿತಾಧಿಕಾರಿ ಎಲ್.ವೀರಭದ್ರರಾವ್, ಪ್ರಾಚಾರ್ಯ ವಂಶಿ ಮುರಳೀಕೃಷ್ಣ ಇತರರಿದ್ದರು.