ವಿಟ್ಲ: ಗಾಂಜಾದಿಂದ ಎಣ್ಣೆ ತೆಗೆದು ಮಾರಾಟ ಮಾಡುತ್ತಿದ್ದ ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ಅಬ್ದುಲ್ ಖಾದರ್ ಯಾನೆ ಅದ್ದು (25) ಎಂಬಾತನನ್ನು ಉಕ್ಕುಡ ಕಾಂತಡ್ಕದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರನ್ನೊಳಗೊಂಡ ವಿಟ್ಲ ಠಾಣೆ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿದ್ದು, ಸುಮಾರು 80 ಸಾವಿರ ರೂ. ಮೌಲ್ಯದ 300 ಗ್ರಾಂ. ಗಾಂಜಾ ಎಣ್ಣೆ, 40 ಗ್ರಾಂ. ಮೊಗ್ಗು ಕಾಯಿ ಮಿಶ್ರಿತ ಗಾಂಜಾ ವಶಕ್ಕೆ ಪಡೆಯಲಾಗಿದೆ. ವಿಶಾಖಪಟ್ಟಣದ ಪೆಡ್ಲರ್ಗಳೊಂದಿಗೆ ಆರೋಪಿಗೆ ಸಂಪರ್ಕ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈತ ಒಂದು ವರ್ಷದಿಂದ ಬೆಂಗಳೂರು ಭಾಗದಲ್ಲಿ ಗಾಂಜಾ ಮಾರಾಟ ಜಾಲ ಹೊಂದಿದ್ದ. ದಕ್ಷಿಣ ಕನ್ನಡ ಜಿಲ್ಲೆಗೆ ಜಾಲ ವಿಸ್ತರಣೆ ಪ್ರಯತ್ನದಲ್ಲಿದ್ದಾಗ ಸಿಕ್ಕಿಬಿದ್ದಿದ್ದಾನೆ. ಕಾಂತಡ್ಕ ಸಾರ್ವಜನಿಕ ರಸ್ತೆ ಬದಿಯಲ್ಲಿ 10 ಎಂಎಲ್ ಎಣ್ಣೆಗೆ 2 ಸಾವಿರ ರೂ. ನಂತೆ ಮಾರಾಟ ಮಾಡುತ್ತಿದ್ದ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾದ ಉಪ ಉತ್ಪನ್ನ ತಯಾರಿಸಿ ಮಾರಾಟ ಮಾಡುವ ಪ್ರಕರಣ ಪತ್ತೆಯಾಗಿರುವುದು ಇದೇ ಮೊದಲು.
ಪೊಲೀಸ್ ವರಿಷ್ಠಾಧಿಕಾರಿ ಡಾ.ಲಕ್ಷ್ಮೀಪ್ರಸಾದ್ ಮಾರ್ಗದರ್ಶನದಲ್ಲಿ ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟೈನ್ ಡಿಸೋಜ ನಿರ್ದೇಶನದಂತೆ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ಎಸ್.ಕೆ., ಬಂಟ್ವಾಳ ಸಂಚಾರಿ ಠಾಣೆ ಉಪನಿರೀಕ್ಷಕ ರಾಜೇಶ್ ಕೆ.ವಿ., ವಿಟ್ಲ ಪ್ರೊಬೆಷನರಿ ಉಪನಿರೀಕ್ಷಕ ಕೃಷ್ಣಕಾಂತ್, ಸಿಬ್ಬಂದಿ ಗೋಣಿಬಸಪ್ಪ, ಕುಮಾರ್, ವಿವೇಕ್, ವಿಟ್ಲ ಸಿಬ್ಬಂದಿ ಕೆ.ಟಿ.ಜಯರಾಮ, ಪ್ರಸನ್ನ, ಲೋಕೇಶ್, ಪ್ರತಾಪ, ವಿನಾಯಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.