ಮಡಿಕೇರಿ: ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಬಾರ್‌ಕೋಡ್ ಸ್ಕ್ಯಾನರ್ ಫಲಕವನ್ನು ಅಳವಡಿಸುವಂತೆ ನಿರ್ಮಿತಿ ಕೇಂದ್ರದ ಎಂಜಿನಿಯರಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶರವರು ಸೂಚಿಸಿದರು.
ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುವಂತಾಗಲು ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಬಾರ್‌ಕೋಡ್ ಸ್ಕ್ಯಾನರ್ ಫಲಕವನ್ನು ರಾಜಾಸೀಟು, ರಾಜರ ಗದ್ದುಗೆ, ನಗರದ ಕೋಟೆ, ಓಂಕಾರೇಶ್ವರ ದೇವಾಲಯ, ನಿಸರ್ಗಧಾಮ, ದುಬಾರೆ ಮತ್ತಿತರ ಪ್ರಮುಖ ಸ್ಥಳಗಳಲ್ಲಿ ಅಳವಡಿಸಬೇಕು. ಬಾರ್‌ಕೋಡ್ ಸ್ಕ್ಯಾನರ್ ಫಲಕ ಅಳವಡಿಸುವುದಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಹಣ ಭರಿಸಲಾಗುವುದು. ಈ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ನಿರ್ಮಿತಿ ಕೇಂದ್ರದ ಎಂಜಿನಿಯರ್‌ಗೆ ತಿಳಿಸಿದರು.
ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದ್ದರಿಂದ ವಾರದ ಎಲ್ಲಾ ದಿನಗಳಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ತೆರೆಯುವಂತಾಗಬೇಕು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿ ಮತ್ತಷ್ಟು ಆಕರ್ಷಣಿಯಗೊಳಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಹೂವಿನ ಗಿಡಗಳನ್ನು ನೆಡುವಂತಾಗಬೇಕು. ಆ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನಕ್ಕೆ ಕೂಡಲೇ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ೦೨ ಬೋರ್‌ವೆಲ್‌ಗಳು ಇದ್ದು, ಒಂದು ಬೋರ್‌ವೆಲ್ ಮಾತ್ರ ಕಾರ್ಯನಿರ್ವಹಿಸುತ್ತಿದೆ. ಬೇಸಿಗೆ ಸಂದರ್ಭದಲ್ಲಿ ಬೋರ್‌ವೆಲ್ ದುರಸ್ತಿಯಾದಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿರುವ ಹುಲ್ಲುಹಾಸು ಒಣಗುವಂತಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನ ನಿರ್ವಹಣೆ ಹಾಗೂ ನಗರದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನ ಮತ್ತು ಕುಶಾಲನಗರ ಕಲಾಭವನ ಕಾಮಗಾರಿ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಜಿಲ್ಲಾಧಿಕಾರಿರವರ ಗಮನಕ್ಕೆ ತಂದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗೆ ಸೂಚಿಸಿದರು. ಕುಶಾಲನಗರ ಕಲಾಭವನ ಕಾಮಗಾರಿ ಸಂಬಂಧ ಖುದ್ದಾಗಿ ಸ್ಥಳ ಪರಿಶೀಲನೆ ಮಾಡೋಣ ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಪೌರಾಯುಕ್ತ ವಿಜಯ, ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಮಣ್ಯಂ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರಮೋದ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ವ್ಯವಸ್ಥಾಪಕ ಕರಿಯಪ್ಪ ಇತರರು ಇದ್ದರು.