ಜಿಲ್ಲೆ

ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಿ: ಮಂಜುಳ

ಆದರ್ಶ್. ಎಂ.ಕೆ.

ಮಡಿಕೇರಿ: ವಿದ್ಯಾರ್ಥಿಗಳು ಶ್ರಮವಹಿಸಿ ಉತ್ತಮ ಶಿಕ್ಷಣವನ್ನು ಪಡೆಯುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಮಂಜುಳ ಹೇಳಿದರು.

ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ವ ಸಮಸ್ಯೆಗಳಿಗೂ ಶಿಕ್ಷಣವು ಪರಿಹಾರವನ್ನು ನೀಡುತ್ತದೆ. ಆ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು ಶ್ರಮವಹಿಸಿ ಉತ್ತಮ ಶಿಕ್ಷಣವನ್ನು ಪಡೆಯುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಈ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವುದಲ್ಲದೆ, ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವಂತಾಗಬೇಕು ಎಂದು ತಿಳಿಸಿದರು.

ದಂತ ವೈದ್ಯ ಬೆಳ್ಯನ ರಾಘವೇಂದ್ರ ಮಾತನಾಡಿ, ನಿರಂತರವಾದ ಅಧ್ಯಯನವು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಅಲ್ಲದೆ ನಾವು ಓದಿದ ಶಿಕ್ಷಣ ಸಂಸ್ಥೆ, ರಾಜ್ಯ ಮತ್ತು ರಾಷ್ಟ್ರಕ್ಕೆ ಉತ್ತಮ ಪ್ರಜೆಯಾಗುವ ಮೂಲಕ ಒಳ್ಳಯೆ ಹೆಸರು ತರುವ ನಿಟ್ಟಿನಲ್ಲಿ ಎಲ್ಲರೂ ಒಳ್ಳೆಯ ರೀತಿಯಲ್ಲಿ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಹುದೇರಿ ರಾಜೇಂದ್ರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಈ ಹಿಂದೆ ಎಲ್ಲರಿಗೂ ಶಿಕ್ಷಣ ದೊರೆಯಲೆಂದು ಜಿಲ್ಲೆಯ ಹಲವಾರು ಕಡೆಗಳಲ್ಲಿ ಶಿಕ್ಷಣ ಸಂಸ್ಥೆಗಳಿರುವಂತೆ ನಮ್ಮ ಮದೆ ಮಹೇಶ್ವರ ವಿದ್ಯಾಸಂಸ್ಥೆಯು ಸುಮಾರು ೪೩ ವರ್ಷಗಳಿಂದ ನಿರಂತರವಾಗಿ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡುತ್ತಾ ಬಂದಿದೆ. ಇದರಲ್ಲಿ ಅಧ್ಯಾಪಕರ ಶ್ರಮವು ಅಡಗಿದೆ. ಎಲ್ಲಾ ವಿದ್ಯಾರ್ಥಿಗಳು ಶಿಕ್ಷಣದ ಸದುಪಯೋಗಪಡೆದುಕೊಂಡು ಕಾಲೇಜಿಗೆ, ತಂದೆ, ತಾಯಿಯರಿಗೆ, ರಾಜ್ಯಕ್ಕೆ ಉತ್ತಮ ಹೆಸರನ್ನು ತರುವ ಮೂಲಕ ಉತ್ತಮ ಪ್ರಜೆಯಾಗಿ ಬಾಳಬೇಕು ಎಂದು ಹೇಳಿದರು.

ರಾಜ್ಯಶಾಸ್ತ್ರ ಉಪನ್ಯಾಸಕಿ ಯೋಗಿತ ಅವರು ಕಾಲೇಜು ವಾರ್ಷಿಕ ವರದಿ ವಾಚಿಸಿದರು. ಕನ್ನಡ ಉಪನ್ಯಾಸಕ ಶ್ರೀನಿವಾಸ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕ ಪರಶುರಾಮಪ್ಪ, ಅರ್ಥಶಾಸ್ತ್ರ ಉಪನ್ಯಾಸಕಿ ವಾಣಿ ಇತರರಿದ್ದರು.

ಬಳಿಕ ಕಾಲೇಜು ಸಭಾಂಗಣದಲ್ಲಿ ೨ನೇ ಮೊಣ್ಣಂಗೇರಿಯ ಯಕ್ಷಗಾನ ಕಲಾವಿದ ಮಾದವ ಮತ್ತು ತಂಡದವರಿಂದ ಶ್ರೀಕೃಷ್ಣ ಲೀಲೆ ಯಕ್ಷಗಾನ ನಡೆಯಿತು. ಜೊತೆಗೆ ವಿದ್ಯಾರ್ಥಿಗಳಿಂದ ವಿಭಿನ್ನ ಮನೋರಂಜನಾ ಕಾರ್ಯಕ್ರಮ ನಡೆಯಿತು.