ಜಿಲ್ಲೆ

ಆದಿದ್ರಾವಿಡ ಸಮುದಾಯಕ್ಕೆ ಒಳ ಮೀಸಲಾತಿ ನೀಡಿ

ಮಂಜುನಾಥ ತಿಮ್ಮಯ್ಯ

ಮೈಸೂರು; ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಒಳ ಮೀಸಲಾತಿ ನೀಡಬೇಕು ಎಂದು ಆದಿದ್ರಾವಿಡ ಸಮುದಾಯದ ಮುಖಂಡರು ಆಗ್ರಹಿಸಿದರು.


ಅಖಿಲ ಕರ್ನಾಟಕ ಡಾ.ಬಿ.ಆರ್.ಅಂಬೇಡ್ಕರ್ ಆದಿದ್ರಾವಿಡ ಪೌರಕಾರ್ಮಿಕರ ಜನಾಂಗದ ಅಭಿವೃದ್ಧಿ ಟ್ರಸ್ಟ್ ವತಿಯಿಂದ ನಗರದ ಇಂಜಿನಿಯರ್ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಆದಿದ್ರಾವಿಡ ಸಮುದಾಯದ ಮುಖಂಡರ ಸಭೆಯಲ್ಲಿ ಈ ಕುರಿತು ನಿರ್ಣಯ ತೆಗೆದುಕೊಳ್ಳಲಾಯಿತು.


ಪ್ರಸ್ತುತ ಮೀಸಲಾತಿಯು ಆದಿದ್ರಾವಿಡ ಸಮುದಾಯಕ್ಕೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಆದ್ದರಿಂದ ವೈಜ್ಞಾನಿಕವಾಗಿ ಒಳ ಮೀಸಲಾತಿ ಅನುಷ್ಠಾನಕ್ಕೆ ತರಬೇಕು. ಜತೆಗೆ, ಆದಿದ್ರಾವಿಡ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಸಮುದಾಯದ ಮುಖಂಡರು ಆಗ್ರಹಿಸಿದರು.


ಪೌರಕಾರ್ಮಿಕರಾಗಿ ಕಾರ್ಯ ನಿರ್ವಹಿಸುವುದೇ ಆದಿದ್ರಾವಿಡ ಸಮುದಾಯದ ಕುಲ ಕಸುಬು ಆಗಿದೆ. ಆದರೆ, ಸ್ವಾತಂತ್ರೃ ಬಂದು 76 ವರ್ಷ ಕಳೆದರೂ ಆದಿದ್ರಾವಿಡ ಸಮುದಾಯ ರಾಜಕೀಯ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮುಂದೆ ಬಂದಿಲ್ಲ. ಅದಕ್ಕಾಗಿ ಪ್ರತ್ಯೇಕ ನಿಗಮ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಜತೆಗೆ, ವಿವಿಧ ಸೌಲಭ್ಯ ಕಲ್ಪಿಸಿಕೊಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಒತ್ತಾಯಿಸಿದರು.


ಜಿಲ್ಲಾ ಕೇಂದ್ರಗಳಲ್ಲಿ ಜನಾಂಗದ ಸಮುದಾಯ ಭವನ ನಿರ್ಮಾಣಕ್ಕೆ ಸಿ.ಎ.ನಿವೇಶನ ನೀಡಬೇಕು, ಸಮಯದಾಯದ ಮಕ್ಕಳಿಗೆ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೂ ಉಚಿತ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಯಿತು.


ಮೈಸೂರು ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಯಲ್ಲಿ ನೇರ ಪಾವತಿ ಪದ್ಧತಿ ಆಧಾರದ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಪೈಕಿ 59 ಜನರು ಮರಣ ಹೊಂದಿದ್ದಾರೆ. ಅವರ ಕುಟುಂಬದ ಅವಲಂಬಿತರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆದ್ದರಿಂದ ಮೃತ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡಬೇಕು ಎಂದು ಒತ್ತಾಯಿಸಲಾಯಿತು.


ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುಬ್ರಮಣ್ಯ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುರೇಶ್‌ಕುಮಾರ್, ಆದಿದ್ರಾವಿಡ ಮಹಾಸಂಘದ ಅಧ್ಯಕ್ಷ ಶ್ರೀನಿವಾಸ್, ಗೌರವಾಧ್ಯಕ್ಷ ಎನ್.ಮಾರ, ಮುಖಂಡರಾದ ಬಿ.ರಾಜು, ನಂಜಪ್ಪ, ವಡಿವೇಲು, ಮಂಜುನಾಥ ಮತ್ತಿತರರಿದ್ದರು.