ಜಿಲ್ಲೆ

ವಿಜೃಂಭಣೆಯ ಚಿನ್ನದ ರಥೋತ್ಸವ

ಚಾಮರಾಜನಗರ: ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಚಿನ್ನದ ತೇರಿನ ಉತ್ಸವವು ವಿಜೃಂಭಣೆಯಿಂದ ನೆರವೇರಿತು.


ಮ.ಬೆಟ್ಟದಲ್ಲಿ ಪ್ರತಿದಿನ ಸಂಜೆ 7 ಗಂಟೆಗೆ ಚಿನ್ನದ ತೇರಿನ ಉತ್ಸವ ಜರುಗುತ್ತದೆ. ಈ ವೇಳೆ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಉತ್ಸವದಲ್ಲಿ ಭಾಗಿಯಾಗುತ್ತಾರೆ. ಇವರೊಂದಿಗೆ ಇತರ ಭಕ್ತರು ಸಹ ಪಾಲ್ಗೊಳ್ಳುತ್ತಾರೆ. ಅಮಾವಾಸ್ಯೆ ಹಾಗೂ ಹಬ್ಬದ ವಿಶೇಷ ದಿನಗಳಲ್ಲಿ ಅಪಾರ ಭಕ್ತರ ಸಮ್ಮುಖದಲ್ಲಿ ಚಿನ್ನದ ತೇರಿನ ಉತ್ಸವವು ನೆರವೇರುತ್ತದೆ. ಆದರೆ, ಮಹಾಶಿವರಾತ್ರಿ ಜಾತ್ರೆ ಹಿನ್ನೆಲೆ ಕಾಲ್ನಡಿಗೆಯ ಮೂಲಕ ಆಗಮಿಸಿ ಬೆಟ್ಟದಲ್ಲಿ ಬೀಡುಬಿಟ್ಟಿದ್ದ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಇದರಿಂದ ಸಂಭ್ರಮ ಮುಗಿಲುಮುಟ್ಟಿತ್ತು.


ವಿವಿಧ ಪುಷ್ಪಗಳು, ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸುವಂತೆ ಮಾಡಲಾಗಿದ್ದ ಚಿನ್ನದ ತೇರಿಗೆ ದೇವರ ಮೂರ್ತಿಯನ್ನು ಕೂರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಜೆ ಉತ್ಸವವನ್ನು ದೇಗುಲದ ಸುತ್ತ ಒಂದು ಸುತ್ತು ಪ್ರದಕ್ಷಿಣೆ ಹಾಕಲಾಯಿತು. ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಉತ್ಸವದ ಮುಂದೆ ಸಾಗಿದರು. ಈ ವೇಳೆ ಭಕ್ತರು ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಎಂಬ ಹರ್ಷೋದ್ಗಾರ ಮೊಳಗಿಸಿದರು.