ಜಿಲ್ಲೆ

ವೈವಿಧ್ಯ ಉತ್ಪನ್ನಗಳನ್ನು ಖರೀದಿಸಲು ಸುವರ್ಣಾವಕಾಶ

ಹಾಸನ: ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿರುವ ವಸ್ತುಪ್ರದರ್ಶನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಹಾಸನ ನಗರದ ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಹಾಸನ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಏರ್ಪಡಿಸಿರುವ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಉತ್ಪಾದನೆಯಾದಂತಹ ಉತ್ಪನ್ನಗಳನ್ನು ಖರೀದಿಸಲು ಒಂದು ಸುವರ್ಣಾವಕಾಶ, ಕೃಷಿ, ತೋಟಗಾರಿಕೆ, ಪಶುಪಾಲನೆ, ರೇಷ್ಮೆ ಮತ್ತಿತರ ಇಲಾಖೆಗಳಿಂದ ರೈತರಿಗೆ ಬೇಕಾದ ಮಾಹಿತಿಗಳನ್ನು ವಸ್ತುಪ್ರದರ್ಶನದಲ್ಲಿ ನೀಡಲಾಗುತ್ತಿದೆ ಎಂದರು.

ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರು ದೇವಿಯ ದರ್ಶನ ಪಡೆಯುವುದರ ಜತೆಗೆ ಇಲ್ಲಿಯ ಜಾನಪದ ಕಲೆ, ಸಂಗೀತದ ರಸದೌತಣವನ್ನು ಸವಿಯಲು ಅನುಕೂಲವಾಗುವಂತೆ ನಗರದ ನಾಲ್ಕು ಕಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ಸಾರ್ವಜನಿಕರೂ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ತಿಳಿಸಿದರು.

ಸಂಸದ ಶ್ರೇಯಸ್ ಎಂ.ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪೂರ್ಣಿಮಾ ಇತರರಿದ್ದರು.