ಬಳ್ಳಾರಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಿಲ್ಲಾದ್ಯಂತ ಉತ್ತಮ ಪ್ರಗತಿ ಸಾಧಿಸಿವೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ ಒಟ್ಟು 54.49 ಲಕ್ಷ ಫಲಾನುಭವಿಗಳಿಗೆ ಸಹಾಯಧನ ನೆರವು ತಲುಪಿದೆ.
ಜಿಲ್ಲೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಸಾಗಣೆ ಮಾಡುವವರು ಕಂಡುಬಂದಲ್ಲಿ ಕೂಡಲೇ ಆ ವಾಹನ ಮತ್ತು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ನಿರ್ದೇಶಿಸಿದರು.
ಗ್ಯಾರಂಟಿ ಯೋಜನೆಗಳ ಸಕಾಲಿಕ ಜಾರಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಸರ್ಕಾರದ ಕಲ್ಯಾಣ ಕಾರ್ಯಗಳು ತಲುಪುತ್ತಿರುವುದಕ್ಕೆ ಇದೊಂದು ಸಾಕ್ಷಿಯಾಗಿದೆ. ಅದೇರೀತಿಯಾಗಿ ತಾಪಂ ಮಟ್ಟದಲ್ಲಿಯೂ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು ಎಂದರು.
ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿ, ಜಿಲ್ಲೆಯಲ್ಲಿ ಆಯೋಜಿಸಲಾಗುವ ಉದ್ಯೋಗ ಮೇಳದಲ್ಲಿ ಯುವ ನಿಧಿ ಯೋಜನೆ ಕುರಿತು ಹೆಚ್ಚು ಪ್ರಚಾರ ನೀಡಬೇಕು. ಜಿಲ್ಲೆಯು ಗಡಿಭಾಗವಾಗಿರುವುದರಿಂದ ಸಾಕಷ್ಟು ಮಹಿಳಾ ಪ್ರಯಾಣಿಕರು ಸಂಚರಿಸುತ್ತಾರೆ. ಈ ಸಂದರ್ಭದಲ್ಲಿ ಪೂರಕ ದಾಖಲೆ ಪರಿಶೀಲಿಸಿ ಟಿಕೆಟ್ ನೀಡಬೇಕು. ನಿಗಮಕ್ಕೂ ಒಳ್ಳೆಯ ಆದಾಯ ಬರುತ್ತಿರುವುದರಿಂದ ಹೊಸ ಬಸ್ ಗಳ ಖರೀದಿಗೆ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.