ಜಿಲ್ಲೆ

ಎಲ್ಲ ಸಮುದಾಯಗಳ ರಕ್ಷಣೆಗೆ ಸರ್ಕಾರ ಬದ್ಧ

ಮೂಡಿಗೆರೆ: ಅಲ್ಪಸಂಖ್ಯಾತರು, ದಲಿತರು ಸೇರಿದಂತೆ ಎಲ್ಲ ಸಮುದಾಯದ ರಕ್ಷಣೆ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಹೇಳಿದರು.

ಅಲ್ಪಸಂಖ್ಯಾತ ಸಮುದಾಯದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ನನ್ನ ತಂದೆ ಬೇಗಾನೆ ರಾಮಯ್ಯ ಅವರು ಸಚಿವರಾಗಿದ್ದಾಗ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಪ್ರತಿ ಹಳ್ಳಿಗೂ ವಿಸ್ತರಿಸಿದ್ದರು. ಅವರು ಬೋರ್‌ವೆಲ್ ರಾಮಯ್ಯ ಎಂದೆ ಪ್ರಖ್ಯಾತರಾಗಿದ್ದರು. ಅವರ ಬಹುತೇಕ ಕನಸು ಈಡೇರಿಸಲು ನನಗೆ ಈಗ ಅವಕಾಶ ಸಿಕ್ಕಿದೆ ಅದನ್ನು ಸಮರ್ಪಕವಾಗಿ ಬಳಸಿಕೊಂಡು ಜಿಲ್ಲೆಯ ಎಲ್ಲ ಸಮಸ್ಯೆಗಳಿಗೂ ಪರಿಹಾರ ಒದಗಿಸಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ಜಿಪಂ ಮಾಜಿ ಅಧ್ಯಕ್ಷ ಕೆ.ಮಹಮದ್ ಮಾತನಾಡಿ, ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಗೋಳು ಕೇಳುವವರು ಇಲ್ಲದಾಗಿದೆ. ಅಲ್ಪಸಂಖ್ಯಾತರ ಮತ ಪಡೆದು ಚುನಾಯಿತರಾದ ಜನಪ್ರತಿನಿಧಿಗಳು ಮುಖಂಡರನ್ನು ಮತ್ತು ಕ್ಷೇತ್ರದ ಜನರನ್ನು ವಕ್ರದೃಷ್ಟಿಯಲ್ಲಿ ನೋಡುತ್ತಿದ್ದಾರೆ ಎಂಬ ಆರೋಪವಿದೆ. ಮೊದಲ ಬಾರಿ ಶಾಸಕರಾದವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು. ಅನಾದಿಕಾಲದಿಂದಲೂ ಅಲ್ಪಸಂಖ್ಯಾತರು ಕಾಂಗ್ರೆಸ್ ಬೆಂಬಲಿಸಿಕೊಂಡು ಬಂದಿದ್ದಾರೆ. ಕಾಂಗ್ರೆಸ್ ಒಡೆದ ಮನೆಯಾಗಬಾರದು. ಈ ಬಗ್ಗೆ ಹೈಕಮಾಂಡ್ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಬೇಕು ಎಂದು ಸಲಹೆ ನೀಡಿದರು.