ಜಿಲ್ಲೆ

ಸರ್ಕಾರ ಜನರ ಸಂಕಷ್ಟ ಪರಿಹರಿಸಬೇಕೇ ಹೊರತು ಸಂಕಷ್ಟ ನೀಡಬಾರದು : ಸಂಸದ ಯದುವೀರ್ ಒಡೆಯರ್

ಸದೇಶ್ ಕಾರ್ಮಾಡ್

ಮೈಸೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದಿಂದ ಬಡವರು, ಮಧ್ಯಮ ವರ್ಗದವರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ತೆರಿಗೆ ಏರಿಕೆ ಕೈಬಿಡಬೇಕು. ಸರ್ಕಾರ ಜನರ ಒಳಿತಿಗೋಸ್ಕರ ಇರಬೇಕೇ ಹೊರತು ತೊಂದರೆ ಕೊಡಲು ಇರಬಾರದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಏರಿಕೆ ಮಾಡಿರುವುದನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿಯೇ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಹಾಗಾಗಿ ಬೆಲೆ ಏರಿಕೆ ನಿಯಂತ್ರಣ ಮಾಡುವ ಮೂಲಕ ಜನ ಸಾಮಾನ್ಯರ ಮೇಲಿನ ಹೊರೆ ತಗ್ಗಿಸಬೇಕು. ಇಲ್ಲವಾದಲ್ಲಿ ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿರುವುದು ನಾಚಿಕೆಗೇಡಿನ ವಿಚಾರ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ. ಇದರ ನಡುವೆ ಒಂದೊಂದು ವಸ್ತುಗಳ ದರ ಏರಿಕೆ ಮಾಡುತ್ತಿರುವುದು ಖಂಡನೀಯ ಎಂದರು.

ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಮಾತನಾಡಿ, ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕು. ರಾಜ್ಯ ಸರ್ಕಾರ ಜನಪರವಾದ ಆಡಳಿತ ನೀಡಲು ಸಂಪೂರ್ಣ ವಿಫಲವಾಗಿದೆ. ಒಂದೆಡೆ ಬೆಲೆ ಏರಿಕೆ ಮತ್ತೊಂದೆಡೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತವಿಲ್ಲ ಎಂದು ಟೀಕಿಸಿದರು.