ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:
ಮನೆಗಳಲ್ಲಿ ಕೆಲಸ ಮಾಡುವವರ ಅನುಕೂಲಕ್ಕಾಗಿ ಮಸೂದೆ ತರಲು ರಾಜ್ಯ ಸರ್ಕಾರ ಯೋಜಿಸಿದ್ದು, ಇದನ್ನು ಶೀಘ್ರದಲ್ಲೇ ಕಾರ್ಯನುಷ್ಠಾನಕ್ಕೆ ತರಲಾಗುವುದು ಎಂದು ಕಾರ್ವಿುಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಬೆಂಗೇರಿ ಸಂತೆ ಮೈದಾನದಲ್ಲಿ ಕಾರ್ವಿುಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ವಿುಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ ಧಾರವಾಡ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಧಾರವಾಡ ಜಿಲ್ಲೆಯ ವಿವಿಧ ನೋಂದಾಯಿತ ಅಸಂಘಟಿತ ಕಾರ್ವಿುಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಮಾತನಾಡಿದ ಅವರು, ಬಡ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮನೆಗೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಅವರಿಗೆ ಕೆಲಸಕ್ಕೆ ತಕ್ಕಂತೆ ಸಂಬಳ ಸಿಗಬೇಕು. ಕೆಲಸದ ಸ್ಥಳದಲ್ಲಿ ಕಿರುಕುಳ ತಡೆಗಟ್ಟಬೇಕು, ಸೂಕ್ತ ಗೌರವ ಸಿಗಬೇಕು ಎಂಬಿತ್ಯಾದಿ ಅಂಶಗಳು ಮಸೂದೆಯಲ್ಲಿ ಅಡಕವಾಗಿರಲಿದೆ ಎಂದರು.
ದೇಶದ ದುಡಿಯುವ ವರ್ಗದಲ್ಲಿ ಶೇ.90 ರಷ್ಟು ಕಾರ್ವಿುಕರು ಅಸಂಘಟಿತ ವಲಯದಲ್ಲಿದ್ದಾರೆ. ಅಸಂಘಟಿತ ಕಾರ್ವಿುಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನ ಉತ್ತಮವಾಗಿದೆ ಎಂದು ಹೇಳಿದರು.
ಯೋಜನೆಗಳು ಜನರಿಗೆ ತಲುಪಲಿ
ಅಧ್ಯಕ್ಷ ತೆ ವಹಿಸಿದ್ದ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರದ ಜನಪರ ಯೋಜನೆಗಳನ್ನು ತಲುಪಿಸಿದಾಗ ಮಾತ್ರ ನಾವು ಜನಪ್ರತಿನಿಧಿಗಳೆಂದು ಹೇಳಿಸಿಕೊಳ್ಳಲು ಯೋಗ್ಯರು. ಕಾರ್ವಿುಕ ಸಚಿವ ಸಂತೋಷ ಲಾಡ್ ಅವರು ಜನರ ಒಳಿತಿಗಾಗಿ ತಮ್ಮದೇ ಆದ ಯೋಚನೆ, ಯೋಜನೆಗಳನ್ನು ಇಟ್ಟುಕೊಂಡಿದ್ದಾರೆ. ಜನಪರ ಕಾರ್ಯಕ್ರಮಗಳಿಗೆ ನಮ್ಮ ಸಹಕಾರ ಇರುತ್ತದೆ ಎಂದರು.