ಹುಬ್ಬಳ್ಳಿ : ಬೆಳಗಾವಿ-ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸುವಂತೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.
ದೆಹಲಿಯ ಸಂಸದ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಸಂಸದ ಶೆಟ್ಟರ್, ವಂದೇ ಭಾರತ ರೈಲಿಗೆ ಈಗಾಗಲೇ ಅಧಿಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ, ಈ ಬಗ್ಗೆ ಅಗತ್ಯ ಸೂಚನೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು.
ಬೆಳಗಾವಿಯ ಬೆಳಗಾವಿ ಬಾರ್ ಅಸೋಸಿಯೇಷನ್ ಅಕ್ಟೋಬರ್ 4ರಂದು 150ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಶೆಟ್ಟರ್ ಅವರು ಇದೇ ಸಂದರ್ಭದಲ್ಲಿ ಪ್ರಧಾನಿ ಅವರನ್ನು ಕೋರಿದರು.
20 ಸಾವಿರಕ್ಕೂ ಹೆಚ್ಚು ವಕೀಲರು ಭಾಗವಹಿಸುತ್ತಿದ್ದಾರೆ. ಉಚ್ಛ ನ್ಯಾಯಾಲಯದ ನ್ಯಾಯಾಧೀಶರೂ ಪಾಲ್ಗೊಳ್ಳುತ್ತಿದ್ದಾರೆ ಎಂದು ಶೆಟ್ಟರ್ ತಿಳಿಸಿದರು.
ಮನವಿ ಅವಲೋಕಿಸಿದ ಪ್ರಧಾನಿ ಮೋದಿ, ಕಾರ್ಯಕ್ರಮದಲ್ಲಿ ಭಾಗವಹಿಸುವ ಭರವಸೆ ನೀಡಿದರು ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.