ಜಿಲ್ಲೆ

ಮೈಸೂರಿನಲ್ಲಿ ಆ.30 ರಂದು ಗೃಹಲಕ್ಷ್ಮಿಯೋಜನೆಗೆ ಚಾಲನೆ : ಸಿದ್ಧತೆ ಪರಿಶೀಲಿಸಿದ ಡಿ.ಕೆ. ಶಿವಕುಮಾರ್

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆ.30 ರಂದು ಗೃಹಲಕ್ಷ್ಮಿಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಂ ಡಿರುವ ಹಿನ್ನೆಲೆಯಲ್ಲಿ ಗುರುವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ನಂತರ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.

ಸಿದ್ಧತೆ ಪರಿಶೀಲನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಗೃಹಲಕ್ಷ್ಮಿಯೋಜನೆಗೆ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಆ.30 ರಂದು ಮಧ್ಯಾಹ್ನ 12ಕ್ಕೆ ಹಮ್ಮಿಕೊಂಡಿರುವ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ , ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿ ದ್ದಾರೆ ಎಂದು ಹೇಳಿದರು.

ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಯ ಫಲಾನುಭವಿಗಳು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳು, ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವ್ಯಾಪ್ತಿಯಲ್ಲಿ ಸ್ಥಳೀಯವಾಗಿ ಏಕಕಾಲದಲ್ಲಿ ಈ ಯೋಜನೆಗೆ ಚಾಲನೆ ದೊರೆಯಲಿದೆ. ರಾಜ್ಯದ ವಿವಿಧೆಡೆ ನಡೆಯುವ ಕಾರ್ಯಕ್ರಮವನ್ನು ಮೈಸೂರಿ ನಲ್ಲಿ ವೀಕ್ಷಿಸಲು ವೇದಿಕೆಯಲ್ಲಿ 140 ಅಡಿ ಅಗಲದ ಎಲ್‌ಇಡಿ ಸ್ಕ್ರೀನ್ ಅಳವಡಿಸಲಾಗುವುದು. ಅದೇ ರೀತಿ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಜ್ಯದ ವಿವಿಧೆಡೆ ನೇರ ಪ್ರಸಾರ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈ ಎಲ್‌ಇಡಿ ಸ್ಕ್ರೀನ್ ಮೂಲಕವೇ ರಾಜ್ಯದ ವಿವಿಧ ಭಾಗದ ನಾಲ್ಕೈದು ಫಲಾನುಭವಿಗಳೊಂದಿಗೆ ಸಂವಾದ ನಡೆಸಲಾಗುವುದು ಎಂದರು.