ಮಂಡ್ಯ: ಸೇವೆ ಕಾಯಂಮಾತಿಗೆ ಒತ್ತಾಯಿಸಿ ತರಗತಿ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹೋರಾಟ ಸೋಮವಾರ 15ನೇ ದಿನ ಪೂರೈಸಿತು.
ನಗರದ ಸರ್‌ಎಂವಿ ಪ್ರತಿಮೆ ಎದುರು ನಡೆಯುತ್ತಿರುವ ಧರಣಿಯಲ್ಲಿ ಕಡ್ಲೆಕಾಯಿ ಮಾರಾಟ ಮಾಡುವ ಮೂಲಕ ರಾಜ್ಯಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು 20 ವರ್ಷದಿಂದ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ತಮ್ಮ ಸೇವೆಯನ್ನು ಕಾಯಂ ಮಾಡುವುದಾಗಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ವೇಳೆ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಇದೀಗ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭರವಸೆಯನ್ನು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘದ ಗೌರವಾಧ್ಯಕ್ಷ ಜಿ.ವಿ.ರಮೇಶ್ ಮಾತನಾಡಿ, ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಹೋರಾಟ ಮಾಡುತ್ತಿದ್ದಾರೆ. ಆದರೂ ಸಹ ರಾಜ್ಯ ಸರ್ಕಾರ ಸೇವಾ ಭದ್ರತೆ ನೀಡಲು ಮೀನಾ ಮೇಷ ಎಣಿಸುತ್ತಿದೆ. ತರಗತಿ ಬಹಿಷ್ಕಾರ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಡಿ.22ರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಲಿದೆ. ಆದರೆ ಇನ್ನೂ ಪಠ್ಯಕ್ರಮ ಬೋಧನೆ ಮುಗಿದಿಲ್ಲ. ವಿದ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಲಿದ್ದಾರೆ. ಆದ್ದರಿಂದ ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಮೂಲಕ ಜನಪರ ಯೋಜನ ಜಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಅದೇ ರೀತಿ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭಾಗ್ಯ ಕಲ್ಪಿಸಲಿ. ಸಚಿವ ಸುಧಾಕರ್ ಮುರ್ತುವರ್ಜಿ ವಹಿಸಿ ಸೇವಾ ಭದ್ರತೆ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಧರಣಿಯಲ್ಲಿ ಜಿಲ್ಲಾಧ್ಯಕ್ಷ ಕೆ.ಪರಮೇಶ್, ಉಪಾಧ್ಯಕ್ಷ ಡಾ.ಎಂ.ಎಸ್.ಚಲುವರಾಜು, ಸಂಘದ ಕಾರ್ಯದರ್ಶಿ ಡಾ.ಗಣೇಶ್ ಇತರರಿದ್ದರು.